ಮೂರು ದಿನದ ತರಬೇತಿಗೆ 2 ಸಾವಿರ ರೂ. ಪಡೆದು ಬ್ರೈನ್‌ವಾಶ್ ಮಾಡಿದ ಆರೋಪ
ಮಂಗಳೂರು : ನಗರದಲ್ಲಿ ಕಾರ್ಯಾಚರಿಸುತ್ತಿರುವ Vexon ಎಂಬ ಖಾಸಗಿ ಸಂಸ್ಥೆ ತರಬೇತಿ ಮತ್ತು ಉದ್ಯೋಗದ ಆಮಿಷವೊಡ್ಡಿ ಕಾಲೇಜು ವಿದ್ಯಾರ್ಥಿಗಳನ್ನು ವಂಚಿಸುತ್ತಿದೆ ಎಂದು ಆರೋಪಿಸಿ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳು ದೂರು ದಾಖಲಿಸಿದ್ದಾರೆ. ಕುದ್ರೋಳಿಯ ಶ್ರೇಯಸ್ ಸ್ವೀಟ್ಸ್ ಎದುರು ಕಾರ್ಯಾಚರಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ವಂಚಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಂಸ್ಥೆಯು ತರಬೇತಿಯ ಹೆಸರಿನಲ್ಲಿ ಪ್ರತಿ ವಿದ್ಯಾರ್ಥಿಯಿಂದ 2,000 ರೂಪಾಯಿ ಸಂಗ್ರಹಿಸುತ್ತದೆ ಮತ್ತು ಮೂರು ದಿನಗಳ ಕಾರ್ಯಕ್ರಮವನ್ನು ನಡೆಸುತ್ತದೆ. ತರಬೇತಿಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತಪ್ಪು ಮಾಹಿತಿ ನೀಡಿ, ಬ್ರೈನ್‌ವಾಶ್ ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ತರಬೇತಿಯ ನಂತರ ವಿದ್ಯಾರ್ಥಿಗಳಿಗೆ 51,000 ರೂಪಾಯಿ ಬೆಲೆಯ ಉತ್ಪನ್ನವನ್ನು ಖರೀದಿಸುವಂತೆ ಸೂಚಿಸಲಾಗುತ್ತದೆ. ಜೊತೆಗೆ ಆ ಉತ್ಪನ್ನವನ್ನು ಮಾರಾಟ ಮಾಡಲು ಒತ್ತಡ ಹೇರಲಾಗುತ್ತದೆ. ಒಂದು ವೇಳೆ ಉತ್ಪನ್ನ ಮಾರಾಟ ಮಾಡಲು ಸಾಧ್ಯವಾಗದಿದ್ದರೆ, ತಲಾ ಮೂವರು ಹೊಸ ವಿದ್ಯಾರ್ಥಿಗಳನ್ನು ಸಂಸ್ಥೆಗೆ ಸೇರಿಸುವ ‘ಚೈನ್ ಸಿಸ್ಟಮ್’ ಅನುಸರಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ದೂರಿನಲ್ಲಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಈ ವಂಚನೆಯ ಜಾಲದಲ್ಲಿ ಸಿಲುಕಿರುವ ಅನೇಕ ವಿದ್ಯಾರ್ಥಿಗಳು, ವಿಶೇಷವಾಗಿ ವಿದ್ಯಾರ್ಥಿನಿಯರು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ. ಇದರಿಂದ ಅವರ ವಿದ್ಯಾಭ್ಯಾಸಕ್ಕೂ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ. ಈ ಗಂಭೀರ ವಿಷಯದ ಬಗ್ಗೆ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಬೆಂಬಲ ನೀಡಿದ್ದು, ಎಲ್ಲರೂ ಒಟ್ಟಾಗಿ ಅಧಿಕಾರಿಗಳನ್ನು ಭೇಟಿ ಮಾಡಿ ಲಿಖಿತ ದೂರು ಸಲ್ಲಿಸಿದ್ದಾರೆ.
ಸಂಸ್ಥೆಯ ಪರವಾನಗಿ ಮತ್ತು ಕಾರ್ಯವೈಖರಿಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ವಿದ್ಯಾರ್ಥಿಗಳಿಗೆ ವಂಚಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.
























