ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತ
ಬೆಂಗಳೂರು: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಇಂದು ನಸುಕಿನ ಹೊತ್ತು ನಡೆದಿದೆ.
ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬವನಿಗೆ ಗಂಭೀರ ಗಾಯವಾಗಿದ್ದು, ಆತನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗ್ಗಿನ ಜಾವ 3 ಗಂಟೆಗೆ ಈ ಅಪಘಾತ ನಡೆದಿದೆ. ಕಾರಿನಲ್ಲಿ ಒಟ್ಟು ನಾಲ್ವರು ಸ್ನೇಹಿತರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
























