ಬೀದಿ ನಾಯಿಗಳ ನಿಯಂತ್ರಣಕ್ಕೂ ಶಿಕ್ಷಕ ನೇಮಕ: ರಾಜ್ಯ ಸರ್ಕಾರದ ಕ್ರಮಕ್ಕೆ ಹೊರಟ್ಟಿ ಆಕ್ರೋಶ

ಬೆಂಗಳೂರು: ಶಿಕ್ಷಕರನ್ನು ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ನೊಡೆಲ್ ಅಧಿಕಾರಿಗಳನ್ನಾಗಿ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಶಿಕ್ಷಕರಿಗೆ ಈಗಾಗಲೇ ಅನೇಕ ಬೋಧಕೇತರ ಜವಾಬ್ದಾರಿಗಳು ನೀಡಲಾಗಿರುವ ಸಂದರ್ಭದಲ್ಲಿ ಇಂತಹ ಕೆಲಸಗಳನ್ನು ನೀಡುವುದು ಹಾಸ್ಯಾಸ್ಪದ ಹಾಗೂ ಶಿಕ್ಷಕ ಸಮುದಾಯಕ್ಕೆ ಮಾಡುವ ಅವಮಾನ ಎಂದಿದ್ದಾರೆ.

ರಾಜ್ಯದ ಶಿಕ್ಷಕರು ಈಗಾಗಲೇ ಮತದಾನ ಕಾರ್ಯಗಳು, ಜನಗಣತಿ, ಜಾತಿಗಣತಿ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಆಡಳಿತಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅದರ ಜೊತೆಗೆ ಶಾಲಾ ಮಕ್ಕಳಿಗೆ ಹಾಲು ಮತ್ತು ಮೊಟ್ಟೆ ವಿತರಣೆ ಸೇರಿದಂತೆ ಹಲವು ಬೋಧಕೇತರ ಜವಾಬ್ದಾರಿಗಳನ್ನೂ ಅವರು ನಿರ್ವಹಿಸುತ್ತಿದ್ದಾರೆ. ಈ ನಡುವೆ ಬೀದಿ ನಾಯಿಗಳ ನಿಯಂತ್ರಣಕ್ಕಾಗಿ ಶಿಕ್ಷಕರನ್ನೇ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಸರ್ಕಾರದ ಸೂಚನೆ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದು, ಇದು ನಿಜಕ್ಕೂ ಬೇಸರದ ಸಂಗತಿ ಎಂದು ತಿಳಿಸಿದ್ದಾರೆ. ಸರ್ಕಾರದ ಈ ಕ್ರಮದಿಂದ ಶಿಕ್ಷಕರನ್ನು ನಾಯಿಗಳಿಗಿಂತ ಕಡಿಮೆ ಮಟ್ಟದಲ್ಲಿ ನೋಡುತ್ತಿರುವಂತಾಗಿದೆ ಎಂಬ ಅಭಿಪ್ರಾಯವೂ ಮೂಡುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.





















































 
 

ಈಗಾಗಲೇ ಶಿಕ್ಷಕರು ಅನೇಕ ಆಡಳಿತಾತ್ಮಕ ಕೆಲಸಗಳಲ್ಲಿ ತೊಡಗಿರುವುದರಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಾದ ಸಮಯ ಸಿಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟ ಹಾಗೂ ಪರೀಕ್ಷಾ ಫಲಿತಾಂಶಗಳ ಮೇಲೂ ಪರಿಣಾಮ ಬೀರುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಶಿಕ್ಷಕರ ಕೊರತೆ ಎದುರಿಸುತ್ತಿರುವ ಸಂದರ್ಭದಲ್ಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಡೆಸುವ ವಿವಿಧ ಕಾರ್ಯಕ್ರಮಗಳಿಗೆ ಶಿಕ್ಷಕರನ್ನೇ ನಿಯೋಜಿಸಲಾಗುತ್ತಿದೆ. ಮುಂದೆ ನಡೆಯಲಿರುವ ಜನಗಣತಿ ಕಾರ್ಯದಲ್ಲಿಯೂ ಶಿಕ್ಷಕರೇ ಭಾಗವಹಿಸಬೇಕಿರುವ ಹಿನ್ನೆಲೆಯಲ್ಲಿ, ಮತ್ತಷ್ಟು ಹೆಚ್ಚುವರಿ ಹೊಣೆಗಾರಿಕೆ ನೀಡುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ಬೀದಿ ನಾಯಿಗಳ ನಿಯಂತ್ರಣಕ್ಕೆ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡುವ ನಿರ್ಧಾರವನ್ನು ಸರ್ಕಾರ ತಕ್ಷಣವೇ ಕೈಬಿಡಬೇಕು ಎಂದು ಹೊರಟ್ಟಿ ಆಗ್ರಹಿಸಿದ್ದಾರೆ.

error: Content is protected !!
Scroll to Top