ಚೆನ್ನೈನಿಂದ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಯುವತಿ
ಮಂಗಳೂರು: ಗಾಂಜಾ ಮಾರಾಟ ಮಾಡಲು ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿ ವಿದ್ಯಾರ್ಥಿನಿಯನ್ನು ಬಂಧಿಸಿರುವ ಮೂಲ್ಕಿ ಪೊಲೀಸರು, ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳವಾರ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸುಹಾನಾ (21) ಎಂಬಾಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು, ಪ್ರಸ್ತುತ ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಆರೋಪಿಯ ಬಳಿ ಇದ್ದ ಸುಮಾರು 35,00,000 ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿ ಚೆನ್ನೈನಿಂದ ಮಾದಕ ವಸ್ತುವನ್ನು ತಂದು ಮಂಗಳೂರಿನಲ್ಲಿ ಮಾರಾಟ ಮಾಡಿ ಹಣ ಗಳಿಸುವ ಉದ್ದೇಶ ಹೊಂದಿದ್ದಳು ಎಂಬುದು ತಿಳಿದುಬಂದಿದೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 32/2026ರಡಿ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(ಸಿ) ಮತ್ತು 20(ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಣಂಬೂರು ಎಸಿಪಿ ತಂಡ ಹಾಗೂ ಮುಲ್ಕಿ ಠಾಣೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.
ಯುವತಿಯ ವಿರುದ್ಧ ಈ ಹಿಂದೆ ಕಾವೂರು ಪೊಲೀಸ್ ಠಾಣೆ ಅ.ಕ್ರ. 37/2026 – ಕಲಂ 8(C), 22(C) ಎನ್‌ಡಿಪಿಎಸ್ ಕಾಯ್ದೆ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ O.R. No: 177/2025-26 – ಕಲಂ 20(b), 2(B), 23(b), 27(A) ಹಾಗೂ 29 ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
























