ಪುತ್ತೂರು: ವಿದ್ಯಾರ್ಥಿಗಳು ಶೈಕ್ಷಣಿಕ ಕಲಿಕೆಯ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಬಹುಮುಖ್ಯ. ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿಯನ್ನು ಹೊಂದಲು ಕ್ರೀಡಾ ಚಟುವಟಿಕೆ ಉತ್ತಮ. ಕ್ರೀಡೆಯಲ್ಲಿ ಸೋಲು- ಗೆಲುವು ಎನ್ನುವುದು ಮುಖ್ಯವಲ್ಲ, ಭಾಗವಹಿಸುವುದು ಮುಖ್ಯವಾಗಿರುತ್ತದೆ. ವಿದ್ಯಾರ್ಥಿಗಳು ಗೆಲುವನ್ನು ನಿರೀಕ್ಷಿಸದೆ ತಮ್ಮ ದೈಹಿಕ ಆರೋಗ್ಯದ ದೃಷ್ಟಿಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಎಂದು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಮಾತನಾಡಿದರು.
ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ಅತ್ಯಂತ ಹೆಚ್ಚು ಜನಪ್ರಿಯ ಗಳಿಸುವ ಹಾಗೂ ವಿರೋಧಿಗಳಿಲ್ಲದ ಕ್ಷೇತ್ರ ಎಂದರೆ ಅದು ಕ್ರೀಡೆ. ಇದಕ್ಕೆ ನಮ್ಮಲ್ಲಿ ಹಲವಾರು ಉದಾಹರಣೆಗಳಿವೆ. ಕ್ರೀಡೆಯಲ್ಲಿ ನಾವು ಹೆಚ್ಚಿನ ಆಸಕ್ತಿಯನ್ನು ಹೊಂದಿ ಅದನ್ನು ನಾವು ಮೈಗೂಡಿಸಿಕೊಳ್ಳಬೇಕು. ನಮ್ಮೊಂದಿಗೆ ಇರುವ ಕ್ರೀಡಾಪಟುಗಳನ್ನು ನಾವು ಸದಾ ಪ್ರೋತ್ಸಾಹಿಸಬೇಕು. ಅದರೊಂದಿಗೆ ಕ್ರೀಡೆಯ ಬಗ್ಗೆ ಹೆಚ್ಚಿನ ಜ್ಞಾನವನ್ನು ಹೊಂದಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಎಲ್ಲಾ ಘಟಕಗಳ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿಶ್ವವಿದ್ಯಾಲಯ, ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಕಾಲೇಜನ್ನು ಪ್ರತಿನಿಧಿಸಿದ ವಿದ್ಯಾರ್ಥಿಗಳು ಕ್ರೀಡಾಜ್ಯೋತಿಯನ್ನು ಬೆಳಗಿಸಿದರು.
ವೇದಿಕೆಯಲ್ಲಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ. ಶಿವಪ್ರಸಾದ್ ಕೆ.ಎಸ್, ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ ನಾಯ್ಕ್ ಬಿ. ಮತ್ತು ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಅರುಣ್ ಪ್ರಕಾಶ್ ಉಪಸ್ಥಿತರಿದ್ದರು.
ಕ್ರೀಡಾ ಕಾರ್ಯದರ್ಶಿ ಹಾಗೂ ತೃತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆನಂದ ಜಿ. ಪ್ರಭು ಸ್ವಾಗತಿಸಿ, ಕಾಲೇಜಿನ ಕ್ರೀಡಾ ಜೊತೆ ಕಾರ್ಯದರ್ಶಿ ಹಾಗೂ ತೃತಿಯ ಬಿಬಿಎ ವಿಭಾಗದ ವಿದ್ಯಾರ್ಥಿನಿ ಧ್ವನಿಕ ಆರ್ ವಂದಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್. ಕಾರ್ಯಕ್ರಮ ನಿರ್ವಹಿಸಿದರು.