ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಪತ್ನಿಯನ್ನು ವಜಾ ಮಾಡಿದ್ದ ಒಂದು ದಿನದೊಳಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಹೊರಡಿಸಿದ್ದು, ಸಿ ಗ್ರೂಪ್ ಹುದ್ದೆಗೆ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಗೆ ಅನುಕಂಪದ ಆಧಾರದಲ್ಲಿ ನೀಡಲಾದ ಹುದ್ದೆಯಿಂದ ವಜಾ ಮಾಡುತ್ತಿದ್ದಂತೆ ಎಲ್ಲಡೆ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತಂತೆ ಇಂದು ಟ್ವಿಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ ಎಂದಿದ್ದಾರೆ.
ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂಬುದಾಗಿ ತಿಳಿಸಿದ್ದಾರೆ.