ಪುತ್ತೂರು: ತಾಲೂಕು ಯುವ ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ವಲಯದ ಆಶ್ರಯದಲ್ಲಿ ಒಕ್ಕಲಿಗ ಗೌಡ ಸಮುದಾಯದ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ ಡಿ. 25ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಕ್ರೀಡಾ ಸಮಿತಿ ಸಂಚಾಲಕ ಎ.ವಿ. ನಾರಾಯಣ ಹೇಳಿದರು.
ಪ್ರೆಸ್ ಕ್ಲಬ್ಬಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ. 25ರಂದು ಇಡೀ ದಿನ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಊರ ಗೌಡರಾದ ಕೊಡಿಪ್ಪಾಡಿಯ ಪಕ್ರು ಗೌಡ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಅಧ್ಯಕ್ಷತೆ ವಹಿಸಲಿದ್ದಾರೆ. ದ.ಕ.ಜಿಲ್ಲಾ ಗೌಡ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ಧ್ವಜಾರೋಹಣ ಮಾಡಲಿದ್ದಾರೆ. ರಾಜ್ಯ ಸಮಾಜ ಕಲ್ಯಾಣ ನಿಗಮದ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ, ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ ಅತಿಥಿಗಳಾಗಿರುವರು ಎಂದರು.
ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ವ್ಯಾಪ್ತಿಯ ಒಟ್ಟು 7 ವಲಯಗಳಲ್ಲಿ ನಡೆದ ವಲಯ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾದ ಸುಮಾರು 750 ಮಂದಿ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುವರು. ಪುರುಷರಿಗೆ ಮ್ಯಾಟ್ ಕಬಡ್ಡಿ, ವಾಲಿಬಾಲ್, ಹಗ್ಗಜಗ್ಗಾಟ, ಕ್ರಿಕೆಟ್, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, 4*100 ಮೀಟರ್ ರಿಲೇ, ಕಬಡ್ಡಿ, ಪ್ರೌಢ ಶಾಲಾ ವಿಭಾಗದಲ್ಲಿ ಬಾಲಕರಿಗೆ ಕಬಡ್ಡಿ, 100 ಮೀ ಮತ್ತು 400 ಮೀಟರ್ ಓಟ, ಬಾಲಕಿಯರಿಗೆ 100 ಮೀಟರ್ ಮತ್ತು 400 ಮೀಟರ್ ಓಟ, ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬಾಲಕರಿಗೆ ಮತ್ತು ಬಾಲಕಿಯರಿಗೆ ಪ್ರತ್ಯೇಕವಾಗಿ 4*100 ಮೀಟರ್ ರಿಲೇ, 50 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಗುಂಡೆಸೆತ ಮತ್ತು 100 ಮೀಟರ್ ಓಟದ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ವಿವರಿಸಿದರು.
ಸಂಜೆ ೫ ಗಂಟೆಗೆ ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ ಅಧ್ಯಕ್ಷತೆಯಲ್ಲಿ ಸಮಾರೋಪ ನಡೆಯಲಿದೆ. ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐನ ಅಧ್ಯಕ್ಷ ಯು.ಪಿ. ರಾಮಕೃಷ್ಣ, ಪುತ್ತೂರು ಒಕ್ಕಲಿಗ ಗೌಡ ಮಹಿಳಾ ಸಂಘದ ಅಧ್ಯಕ್ಷೆ ಮೀನಾಕ್ಷಿ ಡಿ. ಗೌಡ, ಪುತ್ತೂರು ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ. ಮನೋಹರ್ ಗೌಡ ಮತ್ತಿತರರು ಅತಿಥಿಗಳಾಗಿರುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಒಕ್ಕಲಿಗ ಗೌಡ ಸಂಘದ ಪುತ್ತೂರು ನಗರ ಸಮಿತಿ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ನಗರ ವಲಯಾಧ್ಯಕ್ಷ ಪ್ರಶಾಂತ್ ಕೆಮ್ಮಾಯಿ, ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ, ವಲಯ ಕಾರ್ಯದರ್ಶಿ ಆನಂದ ಗೌಡ ತೆಂಕಿಲ ಉಪಸ್ಥಿತರಿದ್ದರು.