ಮಂಗಳೂರು: ಪ್ರವೀಣ್ ನೆಟ್ಟಾರು ಪ್ರಕರಣದ ಬಳಿಕ ಉಗ್ರ ಕೃತ್ಯಗಳ ಜಾಡು ಹಿಡಿದಿರುವ ಎನ್.ಐ.ಎ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಮಿಂಚಿನ ದಾಳಿ ನಡೆಸಿದೆ.
ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಈ ದಾಳಿ ಮಾಡಲಾಗಿದೆ. ಎನ್ಐಎ ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣ ಜಾಲ ಭೇದಿಸುತ್ತಿದೆ. ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಪತ್ತೆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಫುಲ್ವಾರಿ ಶರೀಫ್ ಪ್ರಕರಣ ಪತ್ತೆಯಾಗಿತ್ತು. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ದೇಶದಲ್ಲಿ ಕೋಮು ಗಲಭೆ ಸೃಷ್ಠಿಸಲು ಯತ್ನ ಆರೋಪದ ಮೇಲೆ ಈ ಪ್ರಕರಣ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಎನ್ಐಎ ಅಧಿಕಾರಿಗಳ ತಂಡ ಆಗಮಿಸಿದೆ.