ಪುತ್ತೂರು: ಪ್ರತೀ ಕನ್ನಡ ಶಾಲೆಗಳಲ್ಲಿ ಆಂಗ್ಲ ಮಾಧ್ಯಮವನ್ನು ತೆರೆಸಿ ಆಂಗ್ಲ ಶಿಕ್ಷಕರನ್ನು ನೀಡುವ ಯೋಜನೆಯಿದ್ದು, ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಅವರು ಬುಧವಾರ ಹಾರಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಸರಕಾರಿ ಶಾಲಾ ಅಭಿವೃದ್ಧಿಯಲ್ಲಿ ಶಿಕ್ಷಕರು, ಶಿಕ್ಷಣ ಇಲಾಖೆ ಜತೆಗೆ ಸರಕಾರ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಲು ಮಕ್ಕಳ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವ ನಿಟ್ಟಿನಲ್ಲಿ ತನ್ನ ಕೆಲಸ ಬಗ್ಗೆ ಜವಾಬ್ದಾರಿಯುತವಾಗಿ ಗಮನ ನೀಡಬೇಕು. ಶಾಲೆಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಸರಕಾರದಿಂದ ಒದಗಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇನೆ ಎಂದ ಅವರು, ಎಂದ ಅವರು ಶಾಲೆಯ ಅಭಿವೃದ್ಧಿಯಲ್ಲಿ ಯಾವುದೇ ರಾಜಕೀಯ ಇರಬಾರದು ಎಂಬುದು ನನ್ನ ಆಶಯ ಎಂದರು.
ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ವಿದ್ಯಾರ್ಥಿ ಜೀವನ ಪವಿತ್ರವಾಗಿದ್ದು, ವಿದ್ಯಾರ್ಥಿಗಳು ಒಳ್ಳೆಯ ಜೀವ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದರು.
ವೇದಿಕೆಯಲ್ಲಿ ನಗರಸಭೆ ಸದಸ್ಯೆ ಪ್ರೇಮಲತಾ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಎಸ್‍ಡಿಎಂಸಿ ಅಧ್ಯಕ್ಷ ಕೃಷ್ಣ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ರೈ, ಅಕ್ಷರ ದಾಸೋಹ ಇಲಾಖೆಯ ನವೀನ್ ವೇಗಸ್ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕ ಕೆ.ಕುಕ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ಸ್ವಾಗತಿಸಿದರು. ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಶಾಸಕರು ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರಗಳನ್ನು ಸಾಂಕೇತಿಕವಾಗಿ ವಿತರಿಸಿದರು. ನೂತನ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಶಾಲಾ ವತಿಯಿಂದ ಅಭಿನಂದಿಸಲಾಯಿತು.