ಪುತ್ತೂರು: ಬಾಲಕಾರ್ಮಿಕ ಪದ್ದತಿ ಸಮಾಜಕ್ಕೆ ಅಂಟಿರುವ ಪಿಡುಗು. ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಾರ್ವಜನಿಕರೂ ಕೈಜೋಡಿಸುವ ಮೂಲಕ ಬಾಲಕಾರ್ಮಿಕರನ್ನು ಸಮಾಜ ಮುಖ್ಯವಾಹಿನಿಗೆ ತರಲು ನಾವೆಲ್ಲರೂ ಬದ್ಧತೆಯಿಂದ ಕೆಲಸ ಮಾಡಬೇಕಿದೆ ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸಂಗೀತಾ ಎಸ್ ಎಂ. ಹೇಳಿದರು.
ಅವರು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ನೀಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ಹೊಡೆದೊಡಿಸಲು ಸರಕಾರ ಹಲವಾರು ಕ್ರಮಗಳನ್ನು ಜರುಗಿಸಿದೆ. ಜೊತೆಗೆ ಕಾಯ್ದೆ ಕಾನೂನುಗಳನ್ನು ರಚಿಸಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿದರೂ ಅಲ್ಲಲ್ಲಿ ಇನ್ನೂ ಬಾಲಕಾರ್ಮಿಕ ಪದ್ಧತಿ ಜಾರಿಯಲ್ಲಿರುವದು ವಿಷಾಧನೀಯ. ಈ ಕಾನೂನಿಗೆ ಬಲ ಬರಬೇಕಾದರೆ ಕಾನೂನು ವಿದ್ಯಾರ್ಥಿಗಳು ವಿಶೇಷ ಸಹಕಾರ ನೀಡಬೇಕು ಎಂದರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀರಕ್ಷಾ ಮಾತನಾಡಿ, ಶತಮಾನದಿಂದಲೂ ನಡೆದುಕೊಂಡು ಬಂದಿರುವ ಈ ಬಾಲಕಾರ್ಮಿಕ ಪದ್ಧತಿಯನ್ನು ಕಠಿಣವಾದ ಕಾನೂನು, ಕಾನೂನು ತಿದ್ದುಪಡಿಯಿಂದ ಕಟ್ಟುನಿಟ್ಟಾಗಿ ಕ್ರಮ ಕೈಗೊಂಡಾಗಲೂ ಬಾಲಕಾರ್ಮಿಕ ಪದ್ಧತಿ ಸಂಪೂರ್ಣವಾಗಿ ಕಡಿಮೆಯಾಗಿಲ್ಲ. ಇದರಲ್ಲಿ ಯಶಸ್ವಿಯಾಗಬೇಕಾದರೆ ಪೋಷಕರು, ಸಮಾಜ ಹಾಗೂ ಮುಖ್ಯವಾಗಿ ಸಾರ್ವಜನಿಕರಲ್ಲಿ ಜಾಗೃತಿ ಬರಬೇಕಿದೆ ಎಂದರು.
ಸಹಾಯಕ ಪ್ರಾಧ್ಯಾಪಕ ಹಾಗೂ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಪ್ರಾಸ್ತವಿಕವಾಗಿ ಮಾತನಾಡಿದರು. ಎನ್ ಎಸ್ ಎಸ್ ವಿದ್ಯಾರ್ಥಿ ನಾಯಕ ಕೌಶಿಕ್ ಜೆ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.