ತಮಿಳುನಾಡು : ತಮಿಳುನಾಡಿನ ಕಡಲೂರು ಜಿಲ್ಲೆಯ ಮೇಲ್ಪಟ್ಟಂಪಕ್ಕಂನಲ್ಲಿ ಸೋಮವಾರ ಬೆಳಗ್ಗೆ ಎರಡು ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಏಳು ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಕಂದಾಯ ಅಧಿಕಾರಿಗಳು ಕೂಡ ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಸ್ಗಳ ಡಿಕ್ಕಿಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಅಪಘಾತದಲ್ಲಿ ಭಾಗಿಯಾದವರ ಜೊತೆ ಮಾತನಾಡಿದ ನಂತರವಷ್ಟೇ ತಿಳಿಯಲಿದೆ ಎಂದು ಕಡಲೂರು ಪೊಲೀಸ್ ಮೂಲಗಳು ತಿಳಿಸಿವೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ರಾಜ್ಯ ವಿರೋಧ ಪಕ್ಷದ ನಾಯಕ ಎಡಪ್ಪಾಡಿ ಕೆ.ಪಳನಿಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರು ಜನರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.