ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಜತೆಗೆ ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್-11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ ಜು.19ರಂದು ಈ ಕುರಿತಂತೆ ಆದೇಶಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಯಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂ-ಟ್ಯೂಬ್, ಟಿ.ವಿ.ಚಾನೆಲ್ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು’ ಎಂದು ನಿರ್ಬಂಧಿಸಿ ಆದೇಶಿಸಿದೆ.
ಅಂತೆಯೇ, ‘ಈಗಾಗಲೇ ಈ ಸಂಬಂಧ ಪ್ರಕಟಿಸಲಾಗಿರುವ ವರದಿಗಳನ್ನ ಅಳಿಸಿ ಹಾಕಬೇಕು’ ಎಂದು ಆದೇಶಿಸಿರುವ ನ್ಯಾಯಾಧೀಶರು, 61 ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದ್ದು ವಿಚಾರಣೆ ಮುಂದೂಡಿದ್ದಾರೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ರಾಜಶೇಖರ ಎಸ್.ಹಿಲ್ಯಾರು ಮತ್ತು ಮಂಗಳೂರಿನ ಮಯೂರ ಕೀರ್ತಿ ವಾದ ಮಂಡಿಸಿದರು.
ಬೆಳ್ತಂಗಡಿ ತಾಲ್ಲೂಕು ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012ರಲ್ಲಿ ನಡೆದಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸ್ಥರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ’ ಎಂದು ದಾವೆದಾರರು ಅರ್ಜಿಯಲ್ಲಿ ವಿವರಿಸಿದ್ದಾರೆ.