ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ ಜಿ. ರಾಜ್ಯ ಮಟ್ಟದ ಹಿರಿಯರ ಅಥ್ಲೆಟಿಕ್ ಸ್ಪರ್ಧೆ-2023ರ ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಶನ್ ಆಶ್ರಯದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಪ್ರವಿತ್ರ ಜಿ. ಅವರು 12.85 ಮೀಟರ್ ದೂರ ಜಿಗಿದು ಪ್ರಥಮ ಸ್ಥಾನ ಗಳಿಸಿಕೊಂಡಿದ್ದಾರೆ. ಈ ಸಾಧನೆಯೊಂದಿಗೆ ರಾಷ್ಟ್ರೀಯ ಹಿರಿಯರ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.
ಟ್ರಿಪಲ್ಜಂಪ್ ಸ್ಪರ್ಧೆಯಲ್ಲಿ ಅನೇಕ ಸಾಧನೆ ಮಾಡಿರುವ ಅವರು, ಚತ್ತೀಸ್ಘಡದ ಬಿಲಾಸ್ಪುರದಲ್ಲಿ ನಡೆದ 23ರ ಕೆಳಗಿನ ಹರೆಯದವರ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿಯ ಪದಕ, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಉತ್ತಮ ಕ್ರೀಡಾಪಟು ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಅಥ್ಲೆಟಿಕ್ ಚಾಂಪಿಯನ್ಶಿಪ್ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದು, ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟ ಹಾಗೂ ರಾಷ್ಟ್ರಮಟ್ಟದ ಮುಕ್ತ ಜಿಗಿತಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ. ತಿಳಿಸಿದ್ದಾರೆ.