ಬೆಂಗಳೂರು: ಕರಾವಳಿಯನ್ನು ಬೆಚ್ಚಿಬೀಳಿಸಿದ್ದ 12 ವರ್ಷದ ಹಿಂದಿನ ಕೊಲೆ ಪ್ರಕರಣಕ್ಕೆ ಮತ್ತೆ ಜೀವ ಲಭಿಸಿದ್ದು, ಪ್ರಕರಣದ ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದ ಕೆಳಗಿನ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ರದ್ದುಮಾಡಿದೆ.
ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣದ ಆರೋಪಿಗಳಾದ ಡಾ. ರೇಣುಕಾ ಪ್ರಸಾದ್ ಸೇರಿದಂತೆ 7 ಮಂದಿಯನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ 6 ಮಂದಿಯನ್ನು ದೋಷಿಗಳಾಗಿ ತೀರ್ಮಾನಿದೆ.
ರೇಣುಕಾ ಪ್ರಸಾದ್ ಸೇರಿದಂತೆ 7 ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿದ ತೀರ್ಪನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಆದೇಶ ರದ್ದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಪುರಸ್ಕರಿಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠ ಈ ತೀರ್ಪು ನೀಡಿದೆ.
7 ಆರೋಪಿಗಳ ಪೈಕಿ ಡಾ|ರೇಣುಕಾ ಪ್ರಸಾದ್, ಮನೋಜ್ ರೈ, ಎಚ್.ಆರ್. ನಾಗೇಶ್, ವಾಮನ ಪೂಜಾರಿ, ಶರಣ್ ಪೂಜಾರಿ ಮತ್ತು ಶಂಕರ ಅವರನ್ನು ಎ.ಎಸ್. ರಾಮಕೃಷ್ಣ ಅವರ ಹತ್ಯೆ ಮತ್ತು ಕೊಲೆಗೆ ಒಳಸಂಚು ರೂಪಿಸಿದ ಪ್ರಕರಣದಲ್ಲಿ ದೋಷಿಗಳೆಂದು ಹೈಕೋರ್ಟ್ ತೀರ್ಮಾನಿಸಿದೆ. ಏಳನೇ ಆರೋಪಿಯಾಗಿದ್ದ ಎಚ್.ಯು. ನಾಗೇಶ್ ಕುಮಾರ್ನನ್ನು ಖುಲಾಸೆಗೊಳಿಸಿದ ಅಧೀನ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದು ದೋಷಿಗಳಿಗೆ ಶಿಕ್ಷೆ ಪ್ರಮಾಣ ನಿಗದಿಪಡಿಸುವ ಕುರಿತು ಅಕ್ಟೋಬರ್ 5ರಂದು ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿದೆ.
ಡಾ|ರೇಣುಕಾ ಪ್ರಸಾದ್ ಹಾಗೂ ಆರೊಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿರುವ ಹೈಕೋರ್ಟ್, ಎಲ್ಲರನ್ನೂ ಕೊಲೆ ಮತ್ತು ಒಳಸಂಚು ಕೃತ್ಯದಲ್ಲಿ ದೋಷಿಗಳು ಎಂದು ತೀರ್ಮಾನಿಸಿದೆ.
ಕೊಲೆಗೆ ಕಾರಣವಾಯ್ತೇ ಆಸ್ತಿ ವಿಚಾರ:
ಕುರುಂಜಿ ವೆಂಕಟರಮಣ ಗೌಡ ಅವರು ಕೆವಿಜಿ ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸ್ಪ್ಲಿಂಟರ್ ಇನ್ಸ್ಟಿಟ್ಯೂಷನ್ಸ್ ಸಂಸ್ಥಾಪಕರಾಗಿದ್ದು, ವಯಸ್ಸಾದ ಮತ್ತು ಅನಾರೋಗ್ಯ ಕಾಡಿದ ಕಾರಣ ಶೈಕ್ಷಣಿಕ ಸಂಸ್ಥೆಗಳ ನಿರ್ವಹಣೆ ಹೊಣೆಯನ್ನು ಹಿರಿಯ ಪುತ್ರ ಕೆ.ವಿ. ಚಿದಾನಂದ ಮತ್ತು ಕಿರಿಯ ಪುತ್ರ ಡಾ| ರೇಣುಕಾ ಪ್ರಸಾದ್ ಅವರಿಗೆ ಹಂಚಿಕೊಟ್ಟಿದ್ದರು. ಎ. ಎಸ್. ರಾಮಕೃಷ್ಣ ಕೆವಿಜಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಆಸ್ತಿ, ಶೈಕ್ಷಣಿಕ ಸಂಸ್ಥೆಗಳ ಹೊಣೆಗಾರಿಕೆ ವಿಭಜನೆಯನ್ನು ರಾಮಕೃಷ್ಣ ಅವರ ಸಲಹೆ ಮೇರೆಗೆ ಮಾಡಲಾಗಿದೆ ಎಂಬ ಕಾರಣಕ್ಕಾಗಿ ಹಾಗೂ ಚಿದಾನಂದ ಪರವಾಗಿ ಕೆವಿಜಿ ಮೆಡಿಕಲ್ ಕಾಲೇಜು ವ್ಯವಹಾರಗಳನ್ನು ರಾಮಕೃಷ್ಣ ನೋಡಿಕೊಳ್ಳುತ್ತಿರುವುದನ್ನು ಸಹಿಸದೆ ಡಾ| ರೇಣುಕಾ ಪ್ರಸಾದ್ ಅವರು ರಾಮಕೃಷ್ಣ ಕೊಲೆಗೆ ಸುಪಾರಿ ನೀಡಿದ್ದರು ಎಂದು ದೂರಲಾಗಿತ್ತು. 2011ರ ಏಪ್ರಿಲ್ 28ರಂದು ಬೆಳಗ್ಗೆ 7.45ರ ಹೊತ್ತಿಗೆ ಅಂಬೆತಡ್ಕ ಬಳಿಯ ಶ್ರೀಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ರಾಮಕೃಷ್ಣ ಮೇಲೆ ಆರೋಪಿಗಳು ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ್ದರು. ಆ ದಿನಗಳಲ್ಲಿ ಹಾಡಹಗಲೇ ನಡೆದ ಈ ಕೊಲೆ ಕರಾವಳಿಯನ್ನು ಬೆಚ್ಚಿಬಿಳಿಸಿತ್ತು.
ಪ್ರಕರಣ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಡಾ|ರೇಣುಕಾ ಪ್ರಸಾದ್ ಮೊದಲ ಆರೋಪಿಯಾಗಿದ್ದರು. ಏಳೂ ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆ ಕಾರಣ ಖುಲಾಸೆಗೊಳಿಸಿ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2016ರ ಅ. 21ರಂದು ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸರ್ಕಾರ 2017ರಲ್ಲಿ ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು.