ಬೆಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ್ ಶಾಸ್ತ್ರಿ ಹಾಗೂ ನ್ಯಾಯಮೂರ್ತಿ ಅನಿಲ್ ಕೆ. ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ಸಂಚಿನಲ್ಲಿ ಆರೋಪಿಗಳಾದ ಕೆ. ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಕ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.
ಮೇಲ್ಮನವಿದಾರ ಆರೋಪಿಗಳು ಪ್ರಕರಣದಲ್ಲಿ ಸಕ್ರಿಯ ಪಾತ್ರ ವಹಿಸಿರುವುದನ್ನು ತೋರಿಸಲು ಸೂಕ್ತ ಸಾಕ್ಷ್ಯಧಾರಗಳು ಲಭ್ಯವಿದೆ. ಮೃತನ ಮೇಲೆ ದಾಳಿ ನಡೆದ ವೇಳೆ ಸ್ಥಳದಲ್ಲಿ ಈ ಮೂರು ಆರೋಪಿಗಳು ಪ್ರತ್ಯಕ್ಷವಾಗಿ ಹಾಜರಿರಲಿಲ್ಲ ಎಂದು ವಾದಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರವೀಣ್ ನೆಟ್ಟಾರು ಹತ್ಯೆಗೆ ಯೋಜನೆ ರೂಪಿಸಲು ಹಮ್ಮಿಕೊಂಡಿದ್ದ ಸಂಚಿನ ಸಭೆಯಲ್ಲಿ ಭಾಗವಹಿಸಿದ್ದರು ಹಾಗೂ ಹತ್ಯೆ ಯೋಜನೆ ಬಗ್ಗೆ ಚರ್ಚಿಸಿದ್ದರು. ಸಂಚು ರೂಪಿಸಲು ಯಾವುದೇ ಬಹಿರಂಗ ಕಾಣಿಸಬೇಕೇಂದೇನು ಇಲ್ಲ ಎಂದು ಅಭಿಪ್ರಾಯಪಟ್ಟಿದೆ.
ನಾಲ್ವರು ಸಾಕ್ಷಿಗಳ ಹೇಳಿಕೆ ಪ್ರಕಾರ, ಆರೋಪಿಗಳು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ತನಿಖಾಧಿಕಾರಿಗಳು ಸಂಗ್ರಹಿಸಿರುವ ಆರೋಪಿಗಳ ಪೋನ್ ಕರೆಗಳ ವಿವರಗಳು ಸಹ ಪ್ರಕರಣದಲ್ಲಿ ಮೇಲ್ಮನವಿದಾರ ಆರೋಪಿಗಳು ಪಿತೂರಿ ನಡೆಸುವುದನ್ನು ತೋರಿಸುತ್ತದೆ. ಆರೋಪಿಗಳು ಪ್ರಕರಣದಲ್ಲಿ ನಿರ್ದಿಷ್ಟ ಸಕ್ರಿಯ ಮತ್ತು ಗಮನಾರ್ಹ ಪಾತ್ರ ನಿರ್ವಹಿಸುವುದನ್ನು ಮೇಲ್ನೋಟಕ್ಕೆ ದೃಢಪಡಿಸುವ ಸಾಕ್ಷ್ಯಗಳು ನ್ಯಾಯಾಲಯದ ಮುಂದಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.
ಮೇಲ್ಮನವಿದಾರರು ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದು ಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಮತ್ತು ಸುಗಮಗೊಳಿಸುವ ಕೆಲಸವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳ ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ ಮೇಲ್ಮನವಿಯನ್ನು ವಜಾಗೊಳಿಸಿದೆ.