ದೇವಸ್ಥಾನಕ್ಕೆ ಹೊರಟವರ ದುರಂತ ಅಂತ್ಯ
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಬೊಲೆರೊ ವಾಹನ ಡಿಕ್ಕಿಹೊಡೆದು ಅಪಘಾತ ಸಂಬವಿಸಿದೆ.
ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಪಿಕ್ಅಪ್ ಬೊಲೆರೊ ವಾಹನದಲ್ಲಿ 23 ಜನ ಪ್ರಯಾಣಿಸುತ್ತಿದ್ದರು. ಈ ಪೈಕಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಒಬ್ಬರು ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕು ಆಸ್ಪತ್ರೆಗೆ ಮೃತದೇಹಗಳ ರವಾನೆ ಮಾಡಲಾಗಿದ್ದು, ಸ್ಥಳಕ್ಕೆ ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಮೊದಲು ಪಾದಯಾತ್ರೆ ಮೂಲಕ ಭಕ್ತರು ಹೊರಟಿದ್ದರು. ಈ ವೇಳೆ ಮಾರ್ಗಮಧ್ಯೆ ಗೂಡ್ಸ್ ವಾಹನದಲ್ಲಿ 23 ಭಕ್ತರನ್ನು ಚಾಲಕ ಕೂರಿಸಿಕೊಂಡಿದ್ದಾನೆ. ಕಟಕೋಳ ಬಳಿ ತಡರಾತ್ರಿ ಭಕ್ತರು ಊಟ ಮಾಡಿದ್ದು, ಬಳಿಕ ಸವದತ್ತಿಯತ್ತ ತೆರಳುವ ವೇಳೆ ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ಘಟನೆಯಲ್ಲಿ 6 ಜನರ ಸಾವನಪ್ಪಿ, 10ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಅವರನ್ನು ಗೋಕಾಕ್ ಸೇರಿ ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಸದ್ಯದ ಮಟ್ಟಿಗೆ ಗಾಯಾಳುಗಳು ಚೇತರಿಸಿಕೊಳ್ಳುತ್ತಿರುವ ಮಾಹಿತಿ ದೊರಕಿದೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಕೊಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ.