ಸುಳ್ಯ: ಸುಳ್ಯ ವಿಧಾಸಭಾ ಕ್ಷೇತ್ರದ ಬೆಳ್ಳಾರೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ನೇಮಕದ ಜತೆ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಟೆಕ್ನಿಷಿಯನ್ ಒದಗಿಸಿಕೊಡಬೇಕೆಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕಿ, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಇಲ್ಲದಿರುವ ಕಾರಣ ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ಪಡೆಯಲು ತೊಂದರೆ ಪಡುವಂತಾಗಿದೆ. ಅಲ್ಲದೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಯಂತ್ರಗಳಿದ್ದರೂ ಟೆಕ್ನಿಷಿಯನ್ ನೇಮಕಗೊಂಡಿಲ್ಲ. ಪರಿಣಾಮ ಡಯಾಲಿಸಿಸ್ ಪಡೆಯುವಲ್ಲಿ ರೋಗಿಗಳು ವಂಚಿತರಾಗುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ತಕ್ಷಣ ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಸಚಿವರಿಗೆ ಮನವಿ ಮಾಡಿದ್ದಾರೆ.