ಪುತ್ತೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಗತ ವೈಭವ ಮತ್ತೆ ಮರಳಿ ಪಡೆಯಲಿದ್ದು, ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಮತ್ತೆ ಇದು ಸಾಧ್ಯವಾಗಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.
ಜ.21 ರಂದು ಮಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಇದರ ಪೂರ್ವ ಭಾವಿ ಸಭೆಯಲ್ಲಿ ಕಾರ್ಯಕರ್ತರನ್ನುದ್ದೆಶಿಸಿ ಅವರು ಮಾತನಾಡಿದರು.
ದೇಶದ ಯಾವ ರಾಜ್ಯದಲ್ಲೂ ಇಲ್ಲದ ಗ್ಯಾರಂಟಿ ಯೋಜನೆಯನ್ನು ನಾವು ಜನತೆಗೆ ನೀಡಿದ್ದೇವೆ, ಇದು ಪ್ರತೀ ಕುಟುಂಬಕ್ಕೂ ತಲುಪಿದೆ. ಕೋಟ್ಯಂತರ ಕುಟುಂಬಗಳಿಗೆ ಇದರಿಂದ ಶಕ್ತಿ ತುಂಬಿದೆ. ಗ್ಯಾರಂಟಿ ಯೋಜನೆಗಳಿಂದ ಕೋಟ್ಯಂತರ ಮಹಿಳೆಯನ್ನು ಇಂದು ರಾಜ್ಯದ ಕಾಂಗ್ರೆಸ್ ಸರಕಾರ ಯಜಮಾನಿಯನ್ನಾಗಿ ಮಾಡಿದೆ. ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಖಂಡಿತವಾಗಿಯೂ ಕಾಂಗ್ರೆಸ್ ಕೈ ಗಟ್ಟಿ ಮಾಡಲಿದ್ದಾರೆ ಎಂಬ ಪೂರ್ಣ ವಿಶ್ವಾಸ ನಮಗಿದೆ ಎಂದು ಹೇಳಿದರು.
ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ, ಮಂಗಳೂರಿನಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶಕ್ಕೆ ಪುತ್ತೂರಿನಿಂದ 50 ಸಾವಿರ ಮಂದಿ ಕಾರ್ಯಕರ್ತರು ತೆರಳಲಿದ್ದಾರೆ. ಪ್ರತೀ ವಲಯ ಮತ್ತು ಬೂತ್‌ನಿಂದ ತಲಾ ಎರಡು ಬಸ್ಸಿನ ವ್ಯವಸ್ಥೆಯನ್ನು ಮಾಡಲಾಗುವುದು . ಪುತ್ತೂರಿನಿಂದ ಭಾರೀ ಸಂಖ್ಯೆಯಲ್ಲಿ ಕಾರ್ಯಕರ್ತರು ತೆರಳುವ ಮೂಲಕ ನಮ್ಮ ಶಕ್ತಿಯನ್ನು ಪ್ರದರ್ಶಿಸಬೇಕು ಎಂದು ಹೇಳಿದರು.
ಮಾಜಿ ಮೆಯರ್ ಶಶಿಧರ್ ಹೆಗ್ಡೆ ಮಾತನಾಡಿದರು. ವೇದಿಕೆಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ್ ರೈ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಮಾಜಿ ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಪುತ್ತೂರು ಕಾಂಗ್ರೆಸ್ ಉಸ್ತುವಾರಿ ಜಯಪ್ರಕಾಶ್ ರೈ, ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಹಮ್ಮದಾಲಿ ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ. ರಾಜಾರಾಂ ಕೆ ಬಿ ಸ್ವಾಗತಿಸಿದರು. ಅಕ್ರಮ-ಸಕ್ರಮ ಸಮಿತಿ ಸದಸ್ಯ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು.