ಮಂಗಳೂರು :ಏ.14ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ.
ದ.ಕ ಜಿಲ್ಲೆಗೆ ಹಿಂದಿನ ಬಾರಿ ಮೋದಿ ಅವರು ಭೇಟಿ ನೀಡಿದಾಗ ಸೇರಿದ ಜನತೆಯ ದಾಖಲೆ ಮೀರಿಸುವಂತೆ ಈ ಬಾರಿ ಜನರು ಸಮಾವೇಶಗೊಳ್ಳಲಿದ್ದಾರೆ. ಏ.15,16, 17ರಂದು ಪಕ್ಷದ ರಾಜ್ಯಾಧ್ಯಕ್ಷರಿಂದ ತೊಡಗಿ ಎಲ್ಲ ಪ್ರಮುಖರು, ಅಭ್ಯರ್ಥಿಗಳು, ಕಾರ್ಯಕರ್ತರು ಮನೆ ಮನೆ ಸಂಪರ್ಕ ಹಾಗೂ ಪ್ರಚಾರ ನಡೆಸಲಿದ್ದಾರೆ .
ಏ.10, 11ರಂದು ಪಕ್ಷವು ಬೂತ್ ಮಟ್ಟದ ಮಹಾ ಪ್ರಚಾರ ಅಭಿಯಾನ ಕೈಗೊಳ್ಳಲಿದ್ದು,, ರಾಜ್ಯದ 58 ಸಾವಿರ ಬೂತ್‌ಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮೊದಲ ಹಂತದ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ 15, 16, 17ರಂದು ಮನೆ ಮನೆ ಸಂಪರ್ಕ ಅಭಿಯಾನ ನಡೆಯುತ್ತದೆ. ಈ ಬಾರಿ ಸುರಕ್ಷಿತ ಭಾರತ, ಸಾಂಸ್ಕೃತಿಕ ಭಾರತ ಮತ್ತು ವಿಕಸಿತ ಭಾರತ ಎಂಬ ಮೂರು ಪ್ರಮುಖ ವಿಚಾರಗಳನ್ನು ಇಟ್ಟುಕೊಂಡು ಜನರ ಬಳಿಗೆ ಹೋಗುತ್ತೇವೆ.ಶೌಚಾಲಯ ನಿರ್ಮಾಣದಿಂದ ತೊಡಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ, ಮನೆ ಮನೆಗೆ ಎಲ್‌ಪಿಜಿ ಸಂಪರ್ಕದಿಂದ ಹಿಡಿದು ಚಂದ್ರಯಾನದ ತನಕ ಪ್ರಧಾನಿ ಮೋದಿ ಅವರ ಸರಕಾರ ಕೈಗೊಂಡ ಎಲ್ಲ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಮನೆ ಮನೆಗೆ ತಲುಪಿಸುತ್ತೇವೆ. ಎಲ್ಲ ಹಂತಗಳಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತೇವೆ ಎಂದು ಸುನಿಲ್ ಕುಮಾರ್ ಹೇಳಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿ ಮೊದಲ ಹಂತದ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಇದೀಗ ಪ್ರಧಾನಿ ಮೋದಿ ಅವರ ಪ್ರವಾಸದ ಮೂಲಕ ಎರಡನೇ ಹಂತದ ಪ್ರಚಾರ ಅಭಿಯಾನ ದೊಡ್ಡ ಮಟ್ಟದಲ್ಲಿ ನಡೆಯಲಿದೆ. ಏ.14ರಂದು ಮಂಗಳೂರಿನ ಸಮಾವೇಶ ಮುಗಿದ ಬಳಿಕ ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಅವರು ಬೆಂಗಳೂರಿನಲ್ಲಿ ಬೃಹತ್ ರೋಡ್‌ಶೋ ನಡೆಸಲಿದ್ದಾರೆ.