ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಅವರು ಮಂಗಳವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ ಸರಿಪಡಿಸಲು ವರದಿ ತಯಾರಿಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಸಭೆ ಕರೆದು ಈ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಮುಖ್ಯವಾಗಿ ಬಿ.ಸಿ.ರೋಡು, ಅಡ್ಡಹೊಳೆ, ಶಿರಾಡಿ ಘಾಟ್ ರಸ್ತೆಗಳಿಗಿರುವ ಅಡಚಣೆ, ಕಾನೂನು ತೊಡಕುಗಳನ್ನು ಮನಗಂಡು ಸಾಧ್ಯವಾದಷ್ಟು ಶೀಘ್ರದಲ್ಲಿ ಎಲ್ಲಾ ಕೆಲಸಗಳನ್ನು ಕಡಿಮೆ ಅವಧಿಯಲ್ಲಿ ಮಾಡಿ ಮುಗಿಸುವ ಇರಾದೆ ಹೊಂದಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಹಿಂದೂಪರ ಕಾರ್ಯಕರ್ತರ ಮೆಲೆ ದಬ್ಬಾಳಿಕೆ ಮೂಲಕ ದಮನ ಮಾಡುವ ಕಾರ್ಯ, ಸುಳ್ಳು ಕೇಸುಗಳನ್ನು ಹಾಕುತ್ತಿದ್ದು, ಈ ಕುರಿತ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಅವರ ಶ್ರೇಯಸ್ಸಿಗೋಸ್ಕರ ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮಾಡಲಾಗಿದೆ ಎಂದು ತಿಳಿಸಿದರು.
ಬಳಿಕ ಸಂಸದರು ಪುತ್ತೂರು ಬಿಜೆಪಿ ಕಚೇರಿಗೆ ತೆರಳಿ ಅಲ್ಲಿಂದ ಮಂಗಳೂರಿಗೆ ತೆರಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು, ಮಲ್ಲಿಕಾ ಪ್ರಸಾದ್, ಬಿಜೆಪಿ ಮುಖಂಡರಾದ ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ.ಜಗನ್ನಿವಾಸ ರಾವ್, ಆರ್.ಸಿ.ನಾರಾಯಣ, ಅರುಣ್ ಕುಮಾರ್ ಪುತ್ತಿಲ, ನಿತೀಶ್ ಕುಮಾರ್ ಶಾಂತಿವನ, ಚಂದ್ರಶೇಖರ ರಾವ್ ಬಪ್ಪಳಿಗೆ, ಅನಿಲ್ ತೆಂಕಿಲ, ಪ್ರಸನ್ನ ಮಾರ್ತ, ರಾಜೇಶ್ ಬನ್ನೂರು, ಸಹಜ್ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬಿಜೆಪಿ ಕಾರ್ಯಕರ್ತರು ಮತ್ತಿತರರ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.