ಪುತ್ತೂರು : ಭಾರತ ಸೇವಾದಳದ ಜಿಲ್ಲಾ ಭಾವೈಕ್ಯತಾ ಮೆರವಣಿಗೆ ಫೆ.8 ರಂದು ಕೆಯ್ಯೂರು ಸರಕಾರಿ ಕೆಪಿಎಸ್ ಶಾಲೆಯಲ್ಲಿ ನಡೆಯಲಿದೆ ಎಂದು ಭಾರತ ಸೇವಾದಳದ ತಾಲೂಕು ಸಮಿತಿ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ತಿಳಿಸಿದ್ದಾರೆ.
ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೆರವಣಿಗೆ ಅಂಗವಾಗಿ ಬೆಳಗ್ಗೆ ಕೆಯ್ಯೂರು ಕೆಪಿಎಸ್ ಶಾಲೆಯಲ್ಲಿ ಬೆಳಿಗ್ಗೆ ಧ್ವಜಾರೋಹಣದ ಬಳಿಕ 9.30 ಕ್ಕೆ ಉದ್ಘಾಟನೆಗೊಳ್ಳಲಿದೆ. ಬಳಿಕ ಕೆಯ್ಯೂರು ದೇವಿನಗರದಿಂದ ಮೆರವಣಿಗೆ ಕೆಪಿಎಸ್ ಶಾಲೆಗೆ ಆಗಮಿಸಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ತಾಲೂಕು ಸಮಿತಿ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಸುಮಾರು ಎರಡು ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಭಾರತ ಸೇವಾದಳದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ, ಸೇವಾದಳದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ಏರ್ಪಡಿಸಲಾಗಿದೆ. ಅಲ್ಲದೆ ವಿದ್ಯಾರ್ಥಿಗಳಿಂದ ಕವಾಯತ್ ನಡೆಯಲಿದೆ ಎಂದು ಅವರು ಹೇಳಿದರು.
ಪುತ್ತೂರು ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಲವಾರು ಗಣ್ಯರು, ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಕಳೆದ ಒಂದು ವರ್ಷಗಳಿಂದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷರಾಗಿ, ಭಾರತ ಸೇವಾದಳದ ಪುತ್ತೂರು ತಾಲೂಕು ಅಧ್ಯಕ್ಷರಾಗಿ ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತಿರುವ ಪುತ್ತೂರು ಉಮೇಶ್ ನಾಯಕ್ ಅವರನ್ನು ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಭಾರತ ಸೇವಾದಳದ ದ.ಕ. ಜಿಲ್ಲಾ ಅಧ್ಯಕ್ಷ ಎಸ್.ಬಿ.ಜಯರಾಮ ರೈ, ಕೋಶಾಧ್ಯಕ್ಷ ಸದಾಶಿವ ಭಟ್, ಕೆಯ್ಯೂರು ಕೆಪಿಎಸ್ ಶಾಲಾ ಮುಖ್ಯ ಶಿಕ್ಷಕ ಬಾಬು ಉಪಸ್ಥಿತರಿದ್ದರು.