ಪುತ್ತೂರು: ಅಖಿಲ ಕರ್ನಾಟಕ ಜನಜಾಗೃತಿ ಜಿಲ್ಲಾ ವೇದಿಕೆ ಹಾಗೂ ಪುತ್ತೂರು ತಾಲೂಕು ಜನಜಾಗೃತಿ ವೇದಿಕೆ ಜಂಟಿ ಆಶ್ರಯದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಳೆದ 23 ವರ್ಷಗಳ ಕಾಲ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ಎಲ್.ಎಚ್.ಮಂಜುನಾಥ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಜು.13 ಶನಿವಾರ ಸಾಲ್ಮರ ಕೊಟೇಚಾ ಹಾಲ್ ನಲ್ಲಿ ನಡೆಯಲಿದೆ ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದ.ಕ.ಜಿಲ್ಲಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮುಖ್ಯ ಸಂಚಾಲಕರಾಗಿ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಗ್ರಾಮಾಭಿವೃದ್ಧಿಯ ಕನಸುಗಳನ್ನು ಸಾಕಾರಗೊಳಿಸುವಲ್ಲಿ ಶ್ರಮಿಸಿರುವ ಎಲ್.ಎಚ್.ಮಂಜುನಾಥ್ ಅವರು, ಯಾವುದೇ ಸಾಮಾನ್ಯ ವ್ಯಕ್ತಿಗೆ ಸಿಗುವ, ಕಾರ್ಯಕರ್ತರನ್ನು ಪ್ರೀತಿಯಿಂದ ತಿದ್ದಿ ತೀಡಿ ದುಡಿಯುವ ಜಾಣ್ಮೆ, ಧೈರ್ಯ, ಪ್ರಾಮಾಣಿಕತೆ ನಮಗೆಲ್ಲರಿಗೂ ಆದರ್ಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ವಹಿಸಲಿದ್ದು, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಮೋಹನ್ ಆಳ್ವ ಅಭಿನಂದನಾ ಭಾಷಣ ಮಾಡುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿಯ ಸ್ಥಾಪಕ ಅಧ್ಯಕ್ಷ ವಸಂತ ಸಾಲಿಯಾನ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಪಾಲ್ಗೊಳ್ಳಲಿದ್ದರೆ. ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್, ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ ಉಪಸ್ಥಿತರಿರುವರು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಜನಜಾಗೃತಿ ವೇದಿಕೆ ಪುತ್ತೂರು ತಾಲೂಕು ಅಧ್ಯಕ್ಷ ಲೋಕೇಶ್ ಹೆಗ್ಡೆ, ಕಡಬ ಅಧ್ಯಕ್ಷ ಮಹೇಶ್ ಸವಣೂರು, ತಾಲೂಕು ಯೋಜನಾಧಿಕಾರಿ ಶಶಿಧರ್, ವಲಯ ಅಧ್ಯಕ್ಷ ಸತೀಶ್ ನಾಯ್ಕ್ ಉಪಸ್ಥಿತರಿದ್ದರು.