ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗರಪಂಚಮಿ | ನಾಗರಪಂಚಮಿಯಿಂದ ಇತರ ಹಬ್ಬಗಳಿಗೆ ಮುನ್ನುಡಿ | ನಾಗರಪಂಚಮಿ ಅಣ್ಣ-ತಂಗಿ ಇಬ್ಬರು ಸೇರಿ ಪೂಜಿಸಲ್ಪಡುವ ಹಬ್ಬ

ಹಿಂದೂಗಳ ಪ್ರಥಮ ಹಬ್ಬಕ್ಕೆ ಮುನ್ನುಡಿ ಎಂಬಂತೆ ಇಂದು ಸಂಭ್ರ,ಮದ ನಾಗರಪಂಚಮಿ ಹಬ್ಬ ಆಚರಣೆ ನಡೆಯಲಿದೆ.

ಶ್ರಾವಣ ಮಾಸದ ಶುಕ್ಲಪಕ್ಷ ಪಂಚಮಿಯಂದು ನಾಗರಪಂಚಮಿಯಿಂದ ಹಬ್ಬ ಆರಂಭಗೊಳ್ಳಲಿದ್ದು, ಇಂದು ಪ್ರಥಮ ಹಬ್ಬ ನಾಗರಪಂಚಮಿಯನ್ನು ಸಂಭ್ರಮ, ಸಡಗರದಿಂದ ವಿವಿಧ ನಾಗಕ್ಷೇತ್ರ, ಸನ್ನಿಧಿಗಳಲ್ಲಿ ಆಚರಿಸಲಾಗುತ್ತದೆ.

ಈ ದಿನದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ ಮತ್ತು ಈ ಹಬ್ಬವು ಅಣ್ಣ -ತಂಗಿ ಇಬ್ಬರೂ ಸೇರಿ ಪೂಜಿಸಲ್ಪಡುವ ಹಬ್ಬವೆಂದು ಬಹಳ ಹಿಂದಿನಿಂದಲೂ ಪ್ರತೀತಿ ಇದೆ.



































 
 

ಶ್ರಾವಣ ಶುದ್ಧ ಪಂಚಮಿಯಂದು ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ದಸರಾ ಎಲ್ಲ ಶುಭ ಆಚರಣೆಗಳಿಗೆ ಮೊದಲ ಆರಂಭ ಅಥವಾ ಮೆಟ್ಟಿಲು ಎಂದೇ ಹೇಳಬಹುದು.

ನಾಗರ ಪಂಚಮಿ ಸಂಬಂಧಿಸಿದಂತೆ ಜನಪದ ಮತ್ತು ಪುರಾಣದಲ್ಲಿ ಹಲವು ಕಥೆಗಳಿವೆ. ಜನಪದ ಕಥೆಯ ಪ್ರಕಾರ ನಾಗರ ಪಂಚಮಿ ಬರುವುದು ಮುಂಗಾರಿನ ರಭಸದ ದಿನಗಳ ಮಧ್ಯೆ. ಈ ಕಾಲ ಕೃಷಿ ಚಟುವಟಿಕೆಗಳಿಗೆ ಪರ್ವ ಕಾಲ. ಈ ಕಾಲದಲ್ಲಿ ಕೃಷಿ ಕಾರ್ಯಕ್ಕೆ ಕೀಟ, ಮಿಡತೆಗಳ ಹಾವಳಿಯೂ ಅಧಿಕ. ಅಷ್ಟೇ ಅಲ್ಲದೆ ಫಸಲು ತಿನ್ನಲು ಬರುವ ಇಲಿಗಳಿಗಂತೂ ಕೊರತೆಯಿಲ್ಲ. ಇವೆಲ್ಲದರಿಂದ ರೈತನ ಫಸಲನ್ನು ಕಾಪಾಡುವುದು ಹಾವುಗಳು. ಸೃಷ್ಠಿಯ ಆಹಾರ ಚಕ್ರದಂತೆ ಇಲಿ, ಕಪ್ಪೆಗಳ ಅತಿಯಾದ ಹಾವಳಿಯನ್ನು ನಿಯಂತ್ರಿಸುವಲ್ಲಿ ನಾಗರ ಹಾವು ಪಾತ್ರ ಮುಖ್ಯ. ಇಂತಹ ರೈತ ಮಿತ್ರನಿಗೆ  ಪುಟ್ಟದೊಂದು ಧನ್ಯವಾದ ಹೇಳಲು ನಡೆಸುವ ಪೂಜೆಯೇ ನಾಗರಪಂಚಮಿ.

ಸ್ಕಂದ ಪುರಾಣಗಳಲ್ಲಿ ನಾಗರಪಂಚಮಿ :

ಸ್ಕಂದ ಪುರಾಣದಲ್ಲಿ ನಾಗರ ಪಂಚಮಿಯ ಬಗ್ಗೆ ಕೆಲ ಮಾಹಿತಿಗಳು ಸಿಗುತ್ತದೆ. ಶ್ರೀಕೃಷ್ಣನ ಮಗನಾದ ಸಾಂಬನು ಶಿವಸುತ ಸುಬ್ರಹ್ಮಣ್ಯನಲ್ಲಿ ನಾಗರ ಪಂಚಮಿ ಯನ್ನು ಯಾಕೆ ಆಚರಿಸಲಾಗುತ್ತದೆ ಎಂದು ಪ್ರಶ್ನೆ ಕೇಳಿದಾಗ ಆತನ ಒಂದು ಕಥೆಯನ್ನು ಹೇಳುತ್ತಾನೆ. ಹಿಂದೆ ದೇವಶರ್ಮ ಎಂಬ ಬ್ರಾಹ್ಮಣನೊಬ್ಬನಿದ್ದನು. ಆತನಿಗೆ 8 ಗಂಡು ಮಕ್ಕಳು ಹಾಗೂ ಒಬ್ಬಾಕೆ ಹೆಣ್ಣು ಮಗಳಿದ್ದಳು. ಒಂದು ದಿನ ಗರುಡನಿಂದ ಹೆದರಿಸಲ್ಪಟ್ಟ ನಾಗರವೊಂದು ಈ ಕನ್ನಿಕೆಯ ಬಳಿ ಬಂದು ಆಶ್ರಯವನ್ನು ಕೇಳುತ್ತದೆ. ಭಕ್ತಿಯಿಂದ ಕನ್ನಿಕೆ ಆ ನಾಗನಿಗೆ ಹಾಲು, ಫಲಗಳನ್ನು ಇಟ್ಟು ಭಕ್ತಿಯಿಂದ ಸಾಕುತ್ತಾಳೆ.

ಇದಕ್ಕೆ ಪ್ರತಿಯಾಗಿ ಆ ನಾಗವು ದಿನಂಪ್ರತಿ ಆಕೆಗೆ ಒಂದು ತೊಲೆ ಚಿನ್ನವನ್ನು ನೀಡುತ್ತಿರುತ್ತದೆ. ಹೀಗಿರಲು ಒಂದು ದಿನ ಎಂಟು ಗಂಡು ಮಕ್ಕಳಲ್ಲಿ ಒಬ್ಬನು ತುಂಬಾ ಬಂಗಾರ ಬೇಕೆಂದು ನಾಗನನ್ನು ಪೀಡಿಸಿ, ಕಾಲಿನಿಂದ ಒದೆಯುತ್ತಾನೆ. ಕೋಪಗೊಂಡ ನಾಗರ ಹಾವು ಅವನ್ನು ಸೇರಿದಂತೆ ಇತರ ಏಳು ಜನರನ್ನು ಕೊಂದು ಹೊರಟು ಹೋಗುತ್ತದೆ. ತನ್ನ ಅಣ್ಣಂದಿರ ಸಾವಿಗೆ ತಾನೇ ಕಾರಣನಾದೇ ಎಂದು ಆ ಕನ್ನಿಕೆ, ದೇವರ ಎದುರಿನಲ್ಲಿಯೇ ಶಿರಚ್ಛೇದನಕ್ಕೆ ಮುಂದಾದಾಗ, ನಾರಾಯಣನು ವಾಸುಕಿಗೆ ಆ ಸತ್ತ ಹುಡುಗರನ್ನು ಬದುಕಿಸಲು ಹೇಳುತ್ತಾನೆ. ಈ ರೀತಿ ಪುನಃ ಅಣ್ಣಂದಿರ ಜೀವವನ್ನು ಮರಳಿ ಪಡೆದುಕೊಳ್ಳುವಲ್ಲಿ ಆ ಕನ್ನಿಕೆ ಯಶಸ್ವಿಯಾದ ದಿನವೇ ನಾಗರಪಂಚಮಿ.  ಹಾಗಾಗಿ ಈ ಪಂಚಮಿ ಹೆಣ್ಣುಮಕ್ಕಳಿಗೆ ವಿಶೇಷವೂ ಆಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ನಾಗರಪಂಚಮಿ ಅಂತ್ಯಂತ ವಿಶೇಷತೆಗಳಿಂದ ಕೂಡಿರುತ್ತದೆ. `ನಾಗರ ಪಂಚಮಿ ಬಂತು, ಅಣ್ಣ ಬರುತ್ತಾನೆ ಕರೆಯಾಕ, ಎನ್ನುವ ಜಾನಪದ ಹಾಡು ಹಬ್ಬದ ವಿಶೇಷತೆ ಸಾರುತ್ತದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top