ಪುತ್ತೂರು: ನಗರಸಭೆಯ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಬಿಜೆಪಿಗೇ ಒಲಿದಿದ್ದು, ಅಧ್ಯಕ್ಷರಾಗಿ ಲೀಲಾವತಿ ಹಾಗೂ ಉಪಾಧ್ಯಕ್ಷರಾಗಿ ಬಾಲಚಂದ್ರ ಸೊರಕೆ ಅವಿರೋಧವಾಗಿ ಆಯ್ಕೆಯಾದರು.
ಮಂಗಳವಾರ ಚುನಾವಣೆ ನಡೆದಿದ್ದು, ಚುನಾವಣಾಧಿಕಾರಿ, ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಘೋಷಣೆ ಮಾಡಿದರು.
ಅಧ್ಯಕ್ಷ ಸ್ಥಾನ ಮಹಿಳೆ ಎಸ್.ಸಿ ಗೆ ಮೀಸಲಾಗಿದ್ದು, ಈ ಸ್ಥಾನಕ್ಕೆ ಲೀಲಾವತಿ, ಉಪಾಧ್ಯಕ್ಷತೆಗೆ ಬಾಲಚಂದ್ರ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ ಸುಂದರ ಪೂಜಾರಿ ಬಡಾವು ಅವರನ್ನು ಬಿಜೆಪಿ ಆಯ್ಕೆ ಮಾಡಿತ್ತು.
31 ಸದಸ್ಯರಿರುವ ನಗರಸಭೆಯಲ್ಲಿ ಬಿಜೆಪಿಯ 25 ಸದಸ್ಯರಿದ್ದಾರೆ. ಹೀಗಾಗಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಸುಂದರ ಪೂಜಾರಿ ಬಡಾವು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ಪ್ರಕ್ರಿಯೆ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ, ನಗರಸಭೆ ಪೌರಾಯುಕ್ತ ಮಧು ಎಸ್. ಮನೋಹರ್ ಉಪಸ್ಥಿತರಿದ್ದರು. ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಶಾಸಕ ಅಶೋಕ್ ಕುಮಾರ್ ರೈ ಸನ್ಮಾನಿಸಿ ಅಭಿನಂದಿಸಿದ್ಧಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದರು.