ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣದಲ್ಲಿ ಸೆರೆಯಾಗಿರುವ ಎಂಎಲ್ಎ
ಬೆಂಗಳೂರು : ಜಾತಿ ನಿಂದನೆ ಮಾಡಿ ಜೀವ ಬೆದರಿಕೆಯೊಡ್ಡಿದ ಆರೋಪದಲ್ಲಿ ಬಂಧಿತವಾಗಿರುವ ಆರ್. ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ನ್ಯಾಯಾಲಯ ಎರಡು ದಿನದ ಮಟ್ಟಿಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದಾರೆ. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.
ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾದೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.
ಬಂಧನ ಬಳಿಕ ಮುನಿರತ್ನ ಮಂಕಾಗಿದ್ದರು. ಶನಿವಾರ ಸಂಜೆ ಏನೂ ಮಾತನಾಡದೆ ಮೌನಕ್ಕೆ ಜಾರಿದ್ದರು. ಪೊಲೀಸರು ಮುನಿರತ್ನ ಅವರನ್ನು ಅಶೋಕ್ನಗರ ಠಾಣೆಗೆ ಕರೆತಂದರು. ಮಧ್ಯರಾತ್ರಿ 12 ರಿಂದ 1.30ರವರೆಗೆ ಸತತ ಒಂದೂವರೆ ಗಂಟೆ ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ವಿಚಾರಣೆ ನಡೆಸಿದರು.
ತನಿಖಾಧಿಕಾರಿಗಳ ಪ್ರಶ್ನೆಗೆ ಶಾಸಕ ಮುನಿರತ್ನ ನಾನೇನು ಮಾಡಿಲ್ಲ, ಷಡ್ಯಂತ್ರ ಅಂತ ಉತ್ತರ ನೀಡಿದ್ದಾರೆ. ನ್ಯಾಯಾಧೀಶರ ಮುಂದೆಯೂ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಅಂತ ಮುನಿರತ್ನ ಹೇಳಿದ್ದಾರೆ ಎಂದು ಮಾಹಿತಿ ದೊರೆತಿದೆ.
ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದಲ್ಲದೆ, ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು. ಜೀವ ಬೆದರಿಕೆ ಪ್ರಕರಣದಲ್ಲಿ ಒಟ್ಟು ನಾಲ್ವರು ಆರೋಪಿಗಳಿದ್ದು, ಪ್ರಮುಖ ಆರೋಪಿ ಶಾಸಕ ಮುನಿರತ್ನ ಆಗಿದ್ದಾರೆ. ಎ2 ಮುನಿರತ್ನರ ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.
ಶಾಸಕ ಮುನಿರತ್ನ ಸೆಪ್ಟೆಂಬರ್ 9ರಂದು 20 ಲಕ್ಷ ರೂಪಾಯಿ ಹಣ ಕೇಳಿದ್ದರು. ದುಡ್ಡು ಕೊಡದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇಷ್ಟೇ ಅಲ್ಲದೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಆದರೆ, ಅಷ್ಟರಲ್ಲಾಗಲೇ ಮುನಿರತ್ನ ನಾಪತ್ತೆಯಾಗಿದ್ದರು.