ಸಿದ್ದರಾಮಯ್ಯಗೆ ಮತ್ತೆ ರೀಡೂ ಸಂಕಷ್ಟ : ವರದಿ ಕೇಳಿದ ರಾಜ್ಯಪಾಲರು

ಅರ್ಕಾವತಿ ಡಿನೋಟಿಫಿಕೇಶನ್‌ನಲ್ಲಿ 8 ಸಾವಿರ ಕೋ. ರೂ. ಹಗರಣದ ಆರೋಪ

ಬೆಂಗಳೂರು: ರಾಜ್ಯದಲ್ಲೀಗ ದಿನಕ್ಕೊಂದರಂತೆ ಹಗರಣ ಸುದ್ದಿ ಮಾಡುತ್ತಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಕಿತ್ತಾಟ ಶುರುಮಾಡಿರುವ ಸರಕಾರಕ್ಕೆ ರಾಜ್ಯಪಾಲರೂ ವಿವಿಧ ಪಟ್ಟುಗಳನ್ನು ಹಾಕಿ ಕಾಟ ಕೊಡುತ್ತಿದ್ದಾರೆ. ಈಗ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನಡೆದಿದೆ ಎನ್ನಲಾದ ಅರ್ಕಾವತಿ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ‘ರೀಡೂ ವರದಿ ಕೊಡಿ’ ಎಂದು ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋಟ್ ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ‘ರೀಡೂ’ ಹೆಸರಿನಲ್ಲಿ ಅರ್ಕಾವತಿ ಬಡಾವಣೆಯ ಭೂಮಿ ಡಿನೋಟಿಫಿಕೇಶನ್ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್‌.ಎಸ್‌. ಕೆಂಪಣ್ಣ ಆಯೋಗದ ವರದಿ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಹೇಳಿದ್ದಾರೆ.
2013–18ರ ಅವಧಿಯ ವಿವರಣೆಯನ್ನು ರಾಜ್ಯಪಾಲರು ಕೇಳಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ರಾಜ್ಯಪಾಲರು ಬರೆದಿರುವ ಪತ್ರವನ್ನು ಉಲ್ಲೇಖಿಸಿ, ಆಯೋಗದ ವರದಿಗೆ ಸಂಬಂಧಿಸಿದ ಕಡತವನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ನಗರಾಭಿವೃದ್ಧಿ ಇಲಾಖೆ ಸೆ.11ರಂದು ಸಲ್ಲಿಸಿದೆ.

ಅರ್ಕಾವತಿ ಬಡಾವಣೆಗಾಗಿ ಸ್ವಾಧೀನ ಮಾಡಿದ್ದ ಭೂಮಿಯಲ್ಲಿ ಸುಪ್ರೀಂಕೋರ್ಟ್‌ ಮತ್ತು ಹೈಕೋರ್ಟ್‌ ಸೂಚನೆಯಂತೆ 2014ರಲ್ಲಿ ಡಿನೋಟಿಫಿಕೇಷನ್‌ ಮಾಡಲಾಗಿತ್ತು. 472.25 ಎಕರೆ ಬದಲು ಹೆಚ್ಚುವರಿಯಾಗಿ 119 ಎಕರೆ ಸೇರಿಸಿ 541.25 ಎಕರೆ ಕೈ ಬಿಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ನ್ಯಾ. ಎಚ್‌.ಎಸ್‌. ಕೆಂಪಣ್ಣ ಆಯೋಗವನ್ನು 2015ರಲ್ಲಿ ಸಿದ್ದರಾಮಯ್ಯ ಸರ್ಕಾರ ರಚನೆ ಮಾಡಿತ್ತು. ಇತ್ತೀಚೆಗೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅರ್ಕಾವತಿ ಬಡಾವಣೆಯ ಡಿನೋಚಿಫಿಕೇಷನ್‌ನಲ್ಲಿ 8 ಸಾವಿರ ಕೋಟಿ ರೂ.ಗಳಷ್ಟು ಅಕ್ರಮವಾಗಿದೆ ಎಂಬ ಆರೋಪ ಮಾಡಿದ್ದರು.
ರಾಜ್ಯಪಾಲರಿಗೆ ಆಗಸ್ಟ್‌ 24ರಂದು ಪತ್ರ ಬರೆದಿದ್ದ ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಸಿ.ಟಿ. ರವಿ, ಕೆಂಪಣ್ಣ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದರು.



































 
 

ಏನಿದು ಡಿನೋಟಿಫೈ ಪ್ರಕರಣ?

ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 540 ಎಕರೆಯನ್ನು ಹಿಂದೆ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ಅವರು ‘ರೀಡೂ’ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂದು ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಜಗದೀಶ ಶೆಟ್ಟರ್ ವಿಧಾನಸಭೆ ಅಧಿವೇಶನದಲ್ಲಿಯೇ ಆರೋಪ ಮಾಡಿದ್ದರು.

ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರಿ ಜಟಾಪಟಿಗೆ ಕಾರಣವಾಗಿದ್ದ ಈ ಪ್ರಕರಣದ ವಿಚಾರಣೆಗೆ 2014ರ ಆಗಸ್ಟ್‌ನಲ್ಲಿ ನ್ಯಾ. ಕೆಂಪಣ್ಣ ನೇತೃತ್ವದಲ್ಲಿ ಆಯೋಗವನ್ನು ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ನೇಮಿಸಿತ್ತು. ಅರ್ಕಾವತಿ ಬಡಾವಣೆಗೆ ಸ್ವಾಧೀನಪಡಿಸಿಕೊಂಡಿದ್ದ ಜಮೀನಿನಲ್ಲಿ 2004ರಿಂದ 2014ರವರೆಗೆ 983 ಎಕರೆ ಭೂಸ್ವಾಧೀನ ಪ್ರಕ್ರಿಯೆಯಿಂದ ಹೊರಗಿಟ್ಟಿರುವ ಕುರಿತು ವಿಚಾರಣೆ ನಡೆಸಿ ವರದಿ ನೀಡುವಂತೆ ಆಯೋಗಕ್ಕೆ ಸೂಚಿಸಿತ್ತು.

2017ರ ಆಗಸ್ಟ್‌ನಲ್ಲಿ ಆಯೋಗ 1,861 ಪುಟಗಳ ವರದಿಯನ್ನು ರಾಜ್ಯ ಸರ್ಕಾರದ ಅಂದಿನ ಮುಖ್ಯ ಕಾರ್ಯದರ್ಶಿ ಸುಭಾಶ್‌ಚಂದ್ರ ಕುಂಠಿಯಾ ಅವರಿಗೆ ಸಲ್ಲಿಸಿತ್ತು. ಈ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಅಂದಿನ ಸರ್ಕಾರ ಮಂಡಿಸಿತ್ತು. ಅದನ್ನು ಒಪ್ಪಿದೆಯೋ ಅಥವಾ ತಿರಸ್ಕರಿಸಿದೆಯೋ ಎಂಬುದನ್ನು ಬಹಿರಂಗಪಡಿಸಿರಲಿಲ್ಲ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top