ಮೈಸೂರು ಲೋಕಾಯುಕ್ತದಲ್ಲಿ ಕೇಸ್; ಪತ್ನಿ ಪಾರ್ವತಿ ಎ2 ಆರೋಪಿ
ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಸಲಿ ಸಂಕಷ್ಟದ ಸರಮಾಲೆ ಈಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ. ಸಿಆರ್‌ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಯಾವೆಲ್ಲಾ ಸೆಕ್ಷನ್ ದಾಖಲು ಮಾಡಲಾಗಿದೆ ಎನ್ನುವುದು ಇನ್ನಷ್ಟೇ ತಿಳಿದುಬರಬೇಕಿದೆ.
ದೂರುದಾರ, ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್ಐಆರ್ ದಾಖಲಿಸಿದೆ. ಸಿಎಂ ಸಿದ್ದರಾಮಯ್ಯ A1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A2 ಆರೋಪಿಯಾಗಿದ್ದಾರೆ. ಬಾಮೈದ ಮಲ್ಲಿಕಾರ್ಜುನ A3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್ಐಆರ್ನಲ್ಲಿ ದಾಖಲಿಸಲಾಗಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಪ್ರತಿ ಗುರುವಾರ ಲೋಕಾಯುಕ್ತ ಎಸ್‌ಪಿ ಉದೇಶ್ ಅವರ ಪೆಡೆದ್ದರು. ಬಳಿಕ ಲೋಕಾಯುಕ್ತ ಪ್ರಧಾನ ಕಚೇರಿಗೆ ಭೇಟಿ ನೀಡಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಕೊನೆಗೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಮಾರ್ಗದರ್ಶನದಲ್ಲಿ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್ ಅವರು ಖುದ್ದು ತಾವೇ ಮುಂದೆ ನಿಂತು ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.