ಮುಂಬಯಿ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಮೂರನೇ ಆರೋಪಿಯನ್ನು ಪೊಲೀಸರು ಭಾನುವಾರ ರಾತ್ರಿ ಪುಣೆಯಲ್ಲಿ ಬಂಧಿಸಿದ್ದಾರೆ. ಮೂವರು ಶೂಟರ್‌ಗಳ ಪೈಕಿ ಈತ ತನ್ನ ಸಹೋದರನೊಂದಿಗೆ ಸೇರಿಕೊಂಡು ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗಿದೆ.
ಬಂಧಿತ ಆರೋಪಿಯನ್ನು ಪುಣೆಯ ಪ್ರವೀಣ್ ಲೋಂಕರ್ (28) ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಈತನ ಸಹೋದರ ಶುಭಂ ಲೋಂಕರ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಇದು ಮೂರನೇ ಬಂಧನವಾಗಿದೆ. ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಬಂಧಿತರನ್ನು ಹರ್ಯಾಣದ ಗುರ್ಮೈಲ್ ಬಲ್ಜಿತ್ ಸಿಂಗ್ (23) ಮತ್ತು ಉತ್ತರ ಪ್ರದೇಶದ ಧರ್ಮರಾಜ್ ರಾಜೇಶ್ ಕಶ್ಯಪ್ (19) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಎರಡು ಪಿಸ್ತೂಲ್‌ಗಳು ಮತ್ತು 28 ಸಜೀವ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.
ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಬಾಬಾ ಸಿದ್ದಿಕಿಯನ್ನು ಶನಿವಾರ ರಾತ್ರಿ ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬಯಿಯ ಬಾಂದ್ರಾದಲ್ಲಿರುವ ಅವರ ಮಗನ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.