ಪುತ್ತೂರು: ವಿವೇಕಾನಂದ ಕಾನೂನು ಮಹಾವಿದ್ಯಾಲಯಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿದರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವತಿಯಿಂದ ಸಂಸದರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಮಹಾವಿದ್ಯಾಲಯಕ್ಕೆ ಬಂದ ಸಂಸದರನ್ನು ಆಡಳಿತ ಮಂಡಳಿ ಸದಸ್ಯರು ಹಾಗೂ ಉಪನ್ಯಾಸಕ ವೃಂದದವರು ಸೇರಿ ಸ್ವಾಗತಿಸಿ, ಗೌರವಿಸಲಾಯಿತು.
ಬಳಿಕ ಮಹಾವಿದ್ಯಾಲಯದ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮೆಲ್ಲರ ಸಹಕಾರದಿಂದ ಸಂಸದರಾಗಿ, ನಿಮ್ಮೆಲರ ಪ್ರತಿನಿಧಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ದುಡಿಯುತ್ತೇನೆ ಎಂದ ಅವರು, ಆಧುನಿಕ ಕಾಲಘಟ್ಟದಲ್ಲಿ ಸಾಮಾಜಿಕ ವೈದ್ಯರಾಗಲಿರುವ ಕಾನೂನು ವಿದ್ಯಾರ್ಥಿಗಳಿಗೆ ಜವಾಬ್ದಾರಿ ಜಾಸ್ತಿಯಿದೆ. ಕಾನೂನು ವಿದ್ಯಾರ್ಥಿಗಳಿಗೆ ಸಮಾಜದ ಸಮಸ್ಯೆಗಳನ್ನು ಬದಲಾವಣೆ ಮಾಡಲು ಸಾಕಷ್ಟು ಅವಕಾಶಗಳಿವೆ. ಪ್ರತಿಯೊಬ್ಬ ಕಾನೂನು ವಿದ್ಯಾರ್ಥಿಯು ವಿದ್ಯಾರ್ಥಿ ಜೀವನದಲ್ಲಿ ಎಲ್ಲಾ ವಿಚಾರಗಳನ್ನು ಕಲಿತುಕೊಂಡು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಮಾಡುವ ಮಹತ್ವದ ಜವಾಬ್ದಾರಿಯನ್ನು ನಿಭಾಯಿಸಬೇಕು. ಕಾನೂನು ವಿದ್ಯಾರ್ಥಿಗಳಾಗಿ ಸಮಾಜದ ಕಟ್ಟ ಕಡೆಯ ಜನರಿಗೆ ನ್ಯಾಯ ಒದಗಿಸುವ ಕೆಲಸ ನಿಮ್ಮಿಂದ ಆಗಲಿ ಎಂದು ಶುಭಹಾರೈಸಿದರು.
ವೇದಿಕೆಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಅಧ್ಯಕ್ಷ ಸುರೇಂದ್ರ ಕಿಣಿ ಜಿ., ಸಂಚಾಲಕ ವಿಜಯನಾರಾಯಣ ಕೆ. ಎಂ., ಪ್ರಾಂಶುಪಾಲ ಅಕ್ಷತಾ ಎ. ಪಿ. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಜೀವಂದರ ಜೈನ್, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಸ್ವಾಗತಿಸಿ, ನಿರೂಪಿಸಿದರು.