ಕಳೆದ ವರ್ಷದಂತೆಯೇ ಪ್ರಶ್ನೆ ಪತ್ರಿಕೆ ಇರಲಿದೆ ಎಂದು ಸ್ಪಷ್ಟನೆ
ಬೆಂಗಳೂರು: 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ, ಕಳೆದ ವರ್ಷದ ಮಾದರಿಯಲ್ಲೇ ಪ್ರಶ್ನೆಪತ್ರಿಕೆ ಇರುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಶ್ನೆ ಪತ್ರಿಕೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುರುವ ಸುದ್ದಿ ಸುಳ್ಳು. 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿ ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ.
ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಈ ಸಮಿತಿ ನೀಡುವ ವರದಿಯಂತೆ ಪ್ರಶ್ನೆ ಪತ್ರಿಕೆಯ ಸ್ವರೂಪದಲ್ಲಿ ಬದಲಾವಣೆ ಮಾಡಲಾಗುವುದು. ಈ ಸಾಲಿನ ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸ್ವರೂಪದ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಾವಣೆ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ.