ಇಂದು ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಫೆಂಗಲ್‌ ಚಂಡಮಾರುತ

ಬೆಂಗಳೂರು ಸಹಿತ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫೆಂಗಲ್‌ ಚಂಡಮಾರುತ ತೀವ್ರತೆ ಪಡೆದುಕೊಂಡಿದ್ದು, ಶನಿವಾರ ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ರಾಣಿಪೇಟ್, ತಿರುವಣ್ಣಾಮಲೈ, ವೆಲ್ಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ಮೈಲಾಡುತುರೈ, ನಾಗಪಟ್ಟಿಣಂ ಜಿಲ್ಲೆಗಳು ಮತ್ತು ಕಾರೈಕಲ್ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತ ಉಂಟುಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಪುದುಚೇರಿಯ ಜೊತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್‌ ಅಲರ್ಟ್‌ ಘೋಷಿಸಿದೆ.































 
 

ಈಗಾಗಲೇ ತಮಿಳುನಾಡಿನಲ್ಲಿ ಅಧಿಕಾರಿಗಳು ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಫೆಂಗಲ್‌ ಚಂಡಮಾರುತ ತಾಸಿಗೆ 100ರಿಂದ 120 ಕಿ,ಮೀ. ವೇಗದಲ್ಲಿ ಬೀಸಲಿದ್ದು, ಹೀಗಾಗಿ ರಾಜ್ಯ ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ. ಮಳೆ ಮುನ್ಸೂಚನೆ ಹೊಂದಿರುವ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದೆ.

ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ ರಾಜ್ಯಾದ್ಯಂತ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ಆಶ್ರಯ ಅಗತ್ಯವಿರುವವರಿಗೆ ಸಂಪನ್ಮೂಲಗಳನ್ನು ಸಂಗ್ರಹಿಸಲಾಗಿದೆ. ಈವರೆಗೆ ತಿರುವಳ್ಳೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ 164 ಕುಟುಂಬಗಳ 471 ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದೆ. ಸಂಭವನೀಯ ಪ್ರವಾಹದ ನಿರೀಕ್ಷೆಯಲ್ಲಿ ಸ್ಥಳೀಯ ಅಧಿಕಾರಿಗಳು ಮೋಟಾರ್‌ ಪಂಪ್‌ಗಳು, ಜನರೇಟರ್‌ಗಳು ಮತ್ತು ದೋಣಿಗಳು ಸೇರಿದಂತೆ ಅಗತ್ಯ ಸಾಧನಗಳನ್ನು ಚೆನ್ನೈ, ಕಡಲೂರು ಮತ್ತು ಮೈಲಾಡುತುರೈ ಮುಂತಾದ ಪೀಡಿತ ಪ್ರದೇಶಗಳಿಗೆ ನಿಯೋಜಿಸಿದ್ದಾರೆ.

ಶ್ರೀಲಂಕಾದಲ್ಲೂ ಫೆಂಗಲ್‌ ಹಾವಳಿಗೆ ಜನರು ತತ್ತರಿಸಿದ್ದು, 3 ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಮಳೆ ಸಂಬಂಧಿತ ದುರ್ಘ‌ಟನೆಗಳಲ್ಲಿ 12 ಮಂದಿ ಮೃತಪಟ್ಟಿದ್ದಾರೆ.

ಕರ್ನಾಟಕ ಕರಾವಳಿಯಲ್ಲಿ ಮೋಡ ಕವಿದ ವಾತಾವರಣ

ಚಂಡಮಾರುತದ ಪರಿಣಾಮವಾಗಿ ಕರ್ನಾಕಟದ ಕರಾವಳಿ ಭಾಗದಲ್ಲೂ ಶನಿವಾರ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿದೆ. ಆದರೆ ಹವಾಮಾನ ಇಲಾಖೆ ಕರಾವಳಿಗೆ ಮಳೆಯ ಮುನ್ನೆಚ್ಚರಿಕೆ ನೀಡಿಲ್ಲ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top