ಪುತ್ತೂರು: ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ರಸ್ತೆಗಳನ್ನು ಕಾಲಕಾಲಕ್ಕೆ ಮೇಲ್ದರ್ಜೆಗೇರಿಸುವುದು ಪ್ರಮುಖ ಮೂಲಭೂತ ಸೌಕರ್ಯಗಳಲ್ಲಿ ಒಂದು. ಈ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಅವರ ಮುತುವರ್ಜಿಯಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆದಿದೆ.
ದಿನದಿಂದ ದಿನಕ್ಕೆ ವಾಹನ ದಟ್ಟಣೆ ಏರಿಕೆಯಾಗುವುದರಿಂದ ಗ್ರಾಮೀಣ ಪ್ರದೇಶ ಸಹಿತ ನಗರ ಪ್ರದೇಶಗಳಲ್ಲಿ ಸುಗಮ ಸಂಚಾರಕ್ಕೆ ತೊಡಕಾಗುತ್ತಿದೆ. ಇದರಿಂದ ವಾಹನ ಸವಾರರು ಸಹಿತ ಪಾದಚಾರಿಗಳಿಗೂ ಸಮಸ್ಯೆ ಉಂಟಾಗುತ್ತಿವೆ. ಈ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಮೀಣ ರಸ್ತೆ ಹಾಗೂ ಜಿಲ್ಲಾ ಮುಖ್ಯರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಅಗತ್ಯವೂ ಹೌದು.
ಶಾಸಕ ಸಂಜೀವ ಮಠಂದೂರು ಅವರ ಶಿಫಾರಸಿನ ಮೇಲೆ ಪುತ್ತೂರು ತಾಲೂಕಿನ ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯರಸ್ತೆಯನ್ನಾಗಿ ಹಾಗೂ ಜಿಲ್ಲಾ ಮುಖ್ಯರಸ್ತೆಗಳನ್ನು ರಾಜ್ಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಪಿ.ಆರ್.ಎ.ಎಂ.ಸಿ.ಯ ಪ್ರಧಾನ ಇಂಜಿನಿಯರ್ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ. ಅದರಂತೆ ಪುತ್ತೂರು ತಾಲೂಕಿನ 112.50 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯರಸ್ತೆಗಳನ್ನಾಗಿ ಹಾಗೂ 41 ಕಿ.ಮೀ. ಜಿಲ್ಲಾ ಮುಖ್ಯರಸ್ತೆಗಳನ್ನು ರಾಜ್ಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಲು ಸರಕಾರದಿಂದ ಅನುಮೋದನೆ ದೊರೆತಿದೆ.
ರಸ್ತೆ ಮೇಲ್ದರ್ಜೆಗೇರಿಸಲು ಕಾರಣ
ತನ್ನ ಕ್ಷೇತ್ರದಲ್ಲಿ ರಸ್ತೆ, ಇನ್ನಿತರ ಮೂಲಭೂತ ಸೌಕರ್ಯಗಳಲ್ಲಿ ಕೊರತೆ ಉಂಟಾಗಬಾರದು, ಸುಗಮ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಾರದು ಎಂಬ ದೃಷ್ಟಿಯಿಂದ ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಅಗತ್ಯತೆಯನ್ನು ಶಾಸಕರು ಅರ್ಥವಿಸಿಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಿರುವುದರಿಂದ ಜಿಲ್ಲಾ ಮುಖ್ಯ ರಸ್ತೆಗಳನ್ನೂ ಅದೇ ಪ್ರಮಾಣದಲ್ಲಿ ರಾಜ್ಯ ಹೆದ್ದಾರಿಗಳನ್ನಾಗಿ ಉನ್ನತೀಕರಿಸಲು ಲೋಕೋಪಯೋಗಿ ಇಲಾಖೆಗೆ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದ್ದರು.
ಮೇಲ್ದರ್ಜೆಗೇರಿಸಲು ಇರುವ ಮಾನದಂಡ
ತಾಲೂಕಿನೊಳಗಿನ ಲೋಕೋಪಯೋಗಿ ರಸ್ತೆಗಳು ಸರಾಸರಿ 40 ಕಿ.ಮೀ. / 100 ಸ್ಕ್ವಾರ್ ಕಿ.ಮೀ. ವಿಸ್ತೀರ್ಣಕ್ಕಿಂತ ಕಡಿಮೆ ಇದ್ದರೆ, ಅವುಗಳನ್ನು ಮೇಲ್ದರ್ಜೆಗೇರಿಸಲು ಪ್ರಾತಿನಿಧ್ಯ ನೀಡಲಾಗುತ್ತದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳನ್ನು ಉನ್ನತೀಕರಿಸುವುದು, ಈ ಮೂಲಕ ಆರ್ಥಿಕ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವುದು, ಪ್ರವಾಸಿ ತಾಣಗಳು, ವಾಣಿಜ್ಯ ಕೇಂದ್ರಗಳಿಗೆ ಸಂಪರ್ಕಿಸುವ ರಸ್ತೆಗಳನ್ನು ಲೋಕೋಪಯೋಗಿ ಇಲಾಖೆ ಉನ್ನತೀಕರಿಸುತ್ತದೆ.
ಪ್ರಸ್ತುತ ರಾಜ್ಯದಲ್ಲಿ 7252 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ, 19500 ಕಿ.ಮೀ. ಉದ್ದದ ರಾಜ್ಯ ಹೆದ್ದಾರಿ, 49603 ಕಿ.ಮೀ. ಉದ್ದದ ಜಿಲ್ಲಾ ಮುಖ್ಯ ರಸ್ತೆಗಳು ಹಾಗೂ 1,93,081 ಕಿ.ಮೀ. ಉದ್ಧದ ಗ್ರಾಮೀಣ ರಸ್ತೆಗಳಿವೆ. ವಾಹನ ಸಂಖ್ಯೆಗಳಲ್ಲಿ ಏರಿಕೆ, ಮಾರುಕಟ್ಟೆ, ಪ್ರೇಕ್ಷಣೀಯ ಸ್ಥಳ ಹಾಗೂ ಕೈಗಾರಿಕಾ ಪ್ರದೇಶಗಳು ಮೇಲ್ದರ್ಜೆಗೇರಿದಂತೆ, ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದು ಅತ್ಯಗತ್ಯ.
- ಕೆ.ಕೆ. ಪುತ್ತೂರು