ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಉದ್ದೇಶ ಹೊಂದಿರುವ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ.
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವ ನಿರೀಕ್ಷೆಯಿದೆ. ನಂತರ ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಶಿಫಾರಸು ಮಾಡುವಂತೆ ಮೇಘವಾಲ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ. ಲೋಕಸಭೆಯಲ್ಲಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿಗೆ ಸಮಿತಿಯ ಅಧ್ಯಕ್ಷ ಸ್ಥಾನ ದೊರೆಯಲಿದ್ದು, ಹಲವು ಪಕ್ಷಗಳ ಸಂಸದರು ಸದಸ್ಯರಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಂಗ್ರೆಸ್ ಸಹಿತ ವಿಪಕ್ಷಗಳೆಲ್ಲ ಈ ಐತಿಹಾಸಿಕ ಮಸೂದೆಯನ್ನು ಈಗಾಗಲೇ ವಿರೋಧಿಸಲಾರಂಭಿಸಿವೆ. ಮಸೂದೆ ಪಾಸ್ ಆದರೂ ರಾಜ್ಯಗಳಲ್ಲಿ ಅನುಷ್ಠಾನಿಸುವುದಿಲ್ಲ ಎಂದು ವಿಪಕ್ಷ ಆಡಳಿತವಿರುವ ಕೆಲವು ರಾಜ್ಯಗಳು ಈಗಾಗಲೇ ಹೇಳಿವೆ.
ಕಳೆದ ವಾರ ಕೇಂದ್ರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿತ್ತು. ಸಂವಿಧಾನ ಜಾರಿಗೆ 75 ವರ್ಷ ಪೂರ್ಣ ಹಿನ್ನಲೆ ರಾಜ್ಯಸಭೆಯಲ್ಲಿ ನಡೆಯುತ್ತಿರುವ ವಿಶೇಷ ಚರ್ಚೆಯಲ್ಲಿ ಪ್ರಧಾನಿ ಮೋದಿ ಇಂದು ಭಾಗಿಯಾಗಲಿದ್ದು ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.