ಪುತ್ತೂರು: ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಮೊತ್ತವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸುವಂತೆ ಶಾಸಕ ಸಂಜೀವ ಮಠಂದೂರು ಅವರು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಮನವಿ ನೀಡಿದ್ದರು. ಇದರ ಫಲಿತಾಂಶವೆಂಬಂತೆ, ಈ ಬಾರಿಯ ಬಜೆಟಿನಲ್ಲಿ ಸಹಕಾರಿ ಸಂಘಗಳ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿರುವ ಬಗ್ಗೆ ಘೋಷಣೆ ಮಾಡಿದೆ.
ಇತ್ತೀಚಿನ ವರ್ಷಗಳಲ್ಲಿ ಕೃಷಿ ಉತ್ಪಾದನಾ ವೆಚ್ಚದ ಹೊರೆ ಅಧಿಕವಾಗುತ್ತಿದ್ದು, ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಹೆಚ್ಚಿನ ಬಂಡವಾಳದ ಅಗತ್ಯವಿದೆ. ಆದರೆ ಕೃಷಿಕರು ಅಧಿಕ ಬಡ್ಡಿ ದರದಲ್ಲಿ ಸಾಲ ಪಡೆದು, ಕೃಷಿ ಚಟುವಟಿಕೆ ಮಾಡುವ ಸ್ಥಿತಿಯಲ್ಲಿಲ್ಲ. ಆದ್ದರಿಂದ ಈಗ ಸಹಕಾರಿ ಸಂಘಗಳಲ್ಲಿ ನೀಡುತ್ತಿರುವ ಶೂನ್ಯ ಬಡ್ಡಿ ದರದ ಸಾಲದ ಪ್ರಮಾಣವನ್ನು ಹೆಚ್ಚಿಸಬೇಕು. ಹೀಗೆ ಮಾಡುವುದರಿಂದ ಕೃಷಿಕರಿಗೆ ಬಹು ಪ್ರಯೋಜನ ಆಗಲಿದೆ ಎಂದು ಶಾಸಕ ಸಂಜೀವ ಮಠಂದೂರು ಅವರು ಸಹಕಾರ ಸಚಿವರ ಗಮನ ಸೆಳೆದಿದ್ದರು.
ಕೃಷಿಕರ ಕಷ್ಟವನ್ನು ಅರ್ಥೈಸಿಕೊಂಡ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು, ಸಾಲದ ಪ್ರಮಾಣವನ್ನು ಹೆಚ್ಚು ಮಾಡಿಸಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್ ಮಂಡಿಸುವ ಸಂದರ್ಭ, ಶೂನ್ಯ ಬಡ್ಡಿ ದರದ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗೆ ಹೆಚ್ಚಿಸಿರುವುದಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಶಾಸಕ ಸಂಜೀವ ಮಠಂದೂರು ಅವರ ಶ್ರಮಕ್ಕೆ ಬೆಲೆ ಸಿಕ್ಕಂತಾಗಿದೆ.