ಬೆಳಗಾವಿಯಲ್ಲಿ ಇಬ್ಬರಿಗೆ ಅಂತಿಮ ನಮನ ಸಲ್ಲಿಸಿದ ಸಿಎಂ
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹುತಾತ್ಮರಾಗಿರುವ ಕರ್ನಾಟಕದ ಮೂವರು ಯೋಧರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಐವರು ಹುತಾತ್ಮರಾಗಿದ್ದಾರೆ. ಬೆಳಗಾವಿಯಲ್ಲಿ ಇಬ್ಬರು ಯೋದರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಮನ ಸಲ್ಲಿಸಿ ಸರ್ಕಾರದಿಂದ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿಗಳು ಪುಷ್ಪ ನಮನ ಸಲ್ಲಿಸಿ, ಅಂತಿಮ ಗೌರವ ಸಲ್ಲಿಸಿದರು.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ಮೂವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು. ಮೃತ ಯೋಧರಿಗೆ ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಯೋಧರಿದ್ದ ವಾಹನ ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 300 ಅಡಿ ಆಳದ ಕಂದಕಕ್ಕೆ ಉರುಳಿತು. ವಾಹನ ರಸ್ತೆಯಿಂದ ಜಾರಿದ್ದು ಹೇಗೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.