ಸಭೆ ರದ್ದಾಗಿಲ್ಲ, ಮುಂದೂಡಿದ್ದೇವೆ ಎಂದು ಸ್ಪಷ್ಟನೆ
ಬೆಂಗಳೂರು : ತಾನು ಕರೆದ ಡಿನ್ನರ್ ಮೀಟಿಂಗ್ ರದ್ದುಪಡಿಸಲು ಹೈಕಮಾಂಡ್ ಸೂಚಿಸಿರುವುದರಿಂದ ಗೃಹ ಸಚಿವ ಜಿ.ಪರಮೇಶ್ವರ್ ಕೆಂಡಾಮಂಡಲ ಆಗಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನ ಬಣ ಜಗಳ ಮತ್ತೊಮ್ಮೆ ಬೀದಿಗೆ ಬಂದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿರುವ ಪರಮೇಶ್ವರ್‌ಗೆ ಹೈಕಮಾಂಡ್ ನಡೆಯಿಂದ ಅವಮಾನ ಆಗಿದೆ ಎನ್ನಲಾಗಿದೆ. ವಿದೇಶದಿಂದ ಬಂದ ಕೂಡಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾಯಕರು ಒಬ್ಬೊಬ್ಬರಾಗಿ ಪ್ರತ್ಯೇಕ ಸಭೆ ನಡೆಸುವುದಕ್ಕೆ ಕಡಿವಾಣ ಹಾಕಬೇಕೆಂದು ಹೈಕಮಾಂಡ್‌ಗೆ ತಾಕೀತು ಮಾಡಿದ್ದರು. ಅದರಂತೆ ನಿನ್ನೆ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಫೋನ್ ಮಾಡಿ ಡಿನ್ನರ್ ಮೀಟಿಂಗ್ ಮಾಡಬಾರದೆಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪರಮೇಶ್ವರ್, ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ. ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ. ಸಭೆ ನಡೆಸುತ್ತೇವೆ ಎಂದು ಖಡಕ್ ಆಗಿಯೇ ಹೇಳಿದ್ದಾರೆ. ಹೈಕಮಾಂಡ್‌ಗೆ ಡಿಸಿಎಂ ಡಿ.ಕೆ ಶಿವಕುಮಾರ್ ದೂರು ನೀಡಿದ್ದಾರೆಯೇ ಎಂದು ಕೇಳಿದಾಗ, ಆ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಈ ಸಭೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನೂ ಕರೆಯಬೇಕು ಎಂದು ಚರ್ಚೆ ಆಗಿತ್ತು. ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ. ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದಿದ್ದಾರೆ.
ದಲಿತ ಸಮುದಾಯದ ಮೇಲಿನ ದೌರ್ಜನ್ಯ ಬಗ್ಗೆ ಚರ್ಚೆ ಆಗಬೇಕಿದೆ. ಯಾರೂ ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ ಇದೆ ಎಂದು ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಸದ್ಯದ ಮಟ್ಟಿಗೆ ಸಭೆ ಮುಂದಕ್ಕೆ ಹಾಕಿದ್ದೇವೆ. ಮತ್ತೆ ದಿನಾಂಕ ನಿಗದಿ ಆದಾಗ ತಿಳಿಸುತ್ತೇವೆ. ಏನಾಗಿದೆ ಎಂದು ಎಲ್ಲವನ್ನೂ ಹೇಳಲು ಆಗುವುದಿಲ್ಲವಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.
ಔತಣಕೂಟವನ್ನು ರದ್ದು ಮಾಡಿಲ್ಲ, ಮುಂದೂಡಿಕೆ ಮಾಡಿದ್ದೇವೆ ಅಷ್ಟೆ. ನಮ್ಮ ಔತಣಕೂಟಕ್ಕೆ ಹೈಕಮಾಂಡ್ ವಿರೋಧ ಇಲ್ಲ. ಚಿತ್ರದುರ್ಗ ಸಮಾವೇಶ ಬಗ್ಗೆ ಚರ್ಚಿಸಲು ಸಭೆ ಕರೆದಿದ್ದೆವು. ಔತಣಕೂಟ ಬಗ್ಗೆ ನಾವು ದಿಲ್ಲಿಗೆ ಏನೂ ಹೇಳಿರಲಿಲ್ಲ. ಶಾಸಕರ ಮೀಟಿಂಗ್ ಅಂದಾಗ ಅವರ ಗಮನಕ್ಕೆ ಹೋಗುತ್ತದೆ. ಹೀಗಾಗಿ ರಣದೀಪ್ ಸುರ್ಜೇವಾಲ ಕರೆ ಮಾಡಿ ಅವರೂ ಸಹ ಭಾಗವಹಿಸಲು ಉತ್ಸುಕವಾಗಿರುವುದಾಗಿ ತಿಳಿಸಿದರು. ಹಾಗಾಗಿ ಅವರಿಗೂ ಆಹ್ವಾನ ಕೊಟ್ಟಿದ್ದೇವೆ. ಮುಂದೆ ಸಮಯ ಕೋಡುತ್ತೇನೆ ಎಂದು ನಮಗೆ ಹೇಳಿದ್ದಾರೆ. ಹಾಗಾಗಿ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.