ಏನೇ ದೂರು ಇದ್ದರೂ ಕಾನೂನಿನಡಿ ಪರಿಹಾರ ಕಂಡುಕೊಳ್ಳಲು ಮಹೇಶ್ ಶೆಟ್ಟಿ ತಿಮರೋಡಿಗೆ ನಿರ್ದೇಶನ
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಸಹಚರರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸುವಂತೆ ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಧ್ಯಕ್ಷ ಸೀನಪ್ಪ ಮತ್ತು ನಂದೀಶ್ ಕುಮಾರ್ ಜೈನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ನ್ಯಾಯಪೀಠ ಈ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ಸದಸ್ಯರ ವಿರುದ್ಧ ಮಹೇಶ್ ಶೆಟ್ಟಿ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡಬಾರದು. ಒಂದೊಮ್ಮೆ ಮಾನಹಾನಿ ಹೇಳಿಕೆ ನೀಡಿ, ಅದು ಅಪರಾಧ ಎಂದು ತಿಳಿದು ಬಂದರೆ ಪೊಲೀಸರು ಪರಿಶೀಲನೆ ನಡೆಸಿ ಕಾನೂನಿನ ಅಡಿಯಲ್ಲಿ ಕ್ರಮ ಜರುಗಿಸಬಹುದು ಎಂದು ಕೋರ್ಟ್ ಹೇಳಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅವರು ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ಬಗ್ಗೆ ತಮಗೇನಾದರೂ ದೂರು ಇದ್ದರೆ, ಆ ಬಗ್ಗೆ ಕಾನೂನಿನ ಅಡಿ ಪರಿಹಾರ ಕ್ರಮ ಕಂಡುಕೊಳ್ಳಬಹುದು ಎಂದು ಹೈಕೋರ್ಟ್ ಸೂಚಿಸಿದೆ.