ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಫೈಟ್ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಅದರಲ್ಲೂ ಭಾನುವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ನ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್‌ನೊಳಗೆ ತಳಮಳಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಭಾನುವಾರ ಡಿ.ಕೆ ಶಿವಕುಮಾರ್ ಭಾಗವಹಿಸಿದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಅವರ ಎದುರೇ ಮೊಯ್ಲಿಯವರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಈ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ.
ಮುಖ್ಯಮಂತ್ರಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದೆ. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ. ಮೊಯ್ಲಿ ಅಥವಾ ಮತ್ಯಾರೋ ಹೇಳೋದ್ರಿಂದ ಯಾರೂ ಮುಖ್ಯಮಂತ್ರಿ ಅಗಲ್ಲ, ಅದು ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವ ವಿಷಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.