ಬೆಂಗಳೂರು : ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಸಕರು ನಾಪತ್ತೆಯಾಗಿದ್ದಾರೆ.
ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಬರುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ನೀಡಿದ್ದಾರೆ.
ಸೋಮವಾರ ವಕೀಲರ ಮೂಲಕ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ನ್ಯಾಯಮೂರ್ತಿಗಳ ಮುಂದೆ ಮನವಿ ಮಾಡಿದ್ದಾರೆ. ಲಂಚ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿರುವ ಶಾಸಕರು ಸದ್ಯ ತಲೆಮರೆಸಿಕೊಂಡಿದ್ದಾರೆ.
ಅರ್ಜಿಯನ್ನು ಸ್ವೀಕಾರ ಮಾಡಿದ ನ್ಯಾಯಮೂರ್ತಿ ಕೆ. ನಟರಾಜನ್ ಮಾರ್ಚ್ 7 ಮಂಗಳವಾರ ಅರ್ಜಿ ವಿಚಾರಣೆ ಮಾಡುವುದಾಗಿ ದಿನಾಂಕ ನಿಗದಿ ಮಾಡಿದರು. ಅರ್ಜಿಯ ಕುರಿತು ಯಾವುದೇ ಮಧ್ಯಂತರ ಆದೇಶ ಹೊರಡಿಸಿಲ್ಲ.