ಸುಳ್ಯ : ಇನ್ನೋವಾ ಕಾರು ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸುಳ್ಯದ ಬಿಳಿನೆಲೆ ಗ್ರಾಮದ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೈಕಂಬ-ಗೋಪಾಲಿ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಂಗಳೂರಿನ ರಾಮನಗರದ 73 ವರ್ಷದ ಯಲ್ಲಿಗಯ್ಯ ಎನ್ನಲಾಗಿದೆ. ಕಾರು ಚಲಾಯಿಸುತ್ತಿದ್ದ ಅವರ ಮಗ ನವೀನ್ (29) ಮತ್ತು ನವೀನ್ ಅವರ ತಾಯಿ ದೈಯಮ್ಮ (52) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಡಿಕ್ಕಿಯ ಪರಿಣಾಮವಾಗಿ ಸ್ವಿಫ್ಟ್ ಕಾರು ಪಲ್ಟಿಯಾಗಿದೆ. ಸ್ವಿಫ್ಟ್ ಕಾರಿನಲ್ಲಿದ್ದವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಮನೆಗೆ ಹಿಂತಿರುಗುತ್ತಿದ್ದರು. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಕಡಬ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಗಂಭೀರ ಗಾಯಗೊಂಡಿದ್ದ ಯಲ್ಲಿಗಯ್ಯ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.