ಹಳೆಬೀಡು ವಸತಿ ಶಾಲೆಯಲ್ಲಿ ನಡೆದ ಕೃತ್ಯ
ಹಾಸನ : ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಕೆಲ ತಿಂಗಳುಗಳಿಂದ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು.
ಪುನೀತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ. (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳು.
ಕೆಲವು ತಿಂಗಳುಗಳಿಂದ ವಸತಿ ಶಾಲೆಯ ಎಂಟು ಅಪ್ರಾಪ್ತ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ. ಈ ವಾರದ ಆರಂಭದಲ್ಲಿ, ವಿದ್ಯಾರ್ಥಿಗಳು ಪ್ರಾಂಶುಪಾಲರನ್ನು ಬದಲಾಯಿಸುವಂತೆ ಒತ್ತಾಯಿಸಿ ಪ್ರತಿಭಟನೆ ಪ್ರಾರಂಭಿಸಿದ್ದರು. ಪೊಲೀಸ್ ತಂಡ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿಯ ಪ್ರತಿನಿಧಿಗಳು ಶಾಲೆಗೆ ಭೇಟಿ ಪರಿಶೀಲನೆ ನಡೆಸಿದ್ದರು. ಸಂವಾದದ ಸಂದರ್ಭದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿನ ಸಿಬ್ಬಂದಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಅವರ ಹೇಳಿಕೆಗಳನ್ನು ಆಧರಿಸಿ ಪೊಲೀಸರು ಒಂದೆರಡು ಸಿಬ್ಬಂದಿಯನ್ನು ಕರೆದೊಯ್ದು ಹೆಚ್ಚಿನ ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಹಳೆಬೀಡು ಪೊಲೀಸರು ಐವರು ಆರೋಪಿಗಳ ವಿರುದ್ಧ ಪೋಕ್ಸೊ , ಎಸ್ಸಿ ಮತ್ತು ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಸತಿ ಶಾಲೆಯಲ್ಲಿ ಎಂಟು ಮಂದಿ ಅಪ್ರಾಪ್ತ ವಿದ್ಯಾರ್ಥಿನಿಯವರ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. 10ನೇ ತರಗತಿಯ ಮೂರು ವಿದ್ಯಾರ್ಥಿನಿಯ ಮೇಲೆ ಹಾಗೂ ಏಳನೇ ತರಗತಿಯ ಐದು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದಲ್ಲದೆ 300 ವಿದ್ಯಾರ್ಥಿಗಳಿಗೆ ದಿನಕ್ಕೆ ಬೇಕಾಗುವ ದಿನಸಿ ಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ನೀಡದೆ ಕಳ್ಳತನ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕೂಡ ಪ್ರಕರಣ ದಾಖಲು ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಾಸನ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.