ಪುತ್ತೂರು, ವಿಟ್ಲ, ಉಪ್ಪಿನಂಗಡಿ ಮತ್ತಿತರೆಡೆ ಕಳ್ಳತನ ಮಾಡಿದ್ದ ಆರೋಪಿಗಳು
ಉಡುಪಿ: ಇತ್ತೀಚೆಗೆ ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣೆ, ಕೋಟ ಪೊಲೀಸ್ ಠಾಣೆ ಮತ್ತು ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಅಂತರ್ ರಾಜ್ಯ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಕೊಯ್ದ ಗ್ರಾಮದ ಕಲಾಯಿ ಹೌಸ್ ನಿವಾಸಿ ಇಬ್ರಾಹಿಂ ಕಲಂದರ್ ಹಾಗೂ ಕಾಸರಗೋಡು ಜಿಲ್ಲೆಯ ಕುಂಬಳೆ ಉರ್ಮಿಚಾಲ್ ಬೇಕೂರು ನಿವಾಸಿ ಮಹಮ್ಮದ್ ರಿಯಾಜ್ ಅಲಿಯಾಸ್ ಕಡಪ್ಪ ರಿಯಾಜ್ ಸೆರೆಯಾಗಿರುವ ಆರೋಪಿಗಳು. ಈ ಪೈಕಿ ಮಹಮ್ಮದ್ ರಿಯಾಜ್ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಕುಂಬಳೆ ಮೊಗ್ರಾಲ್ ಪುತ್ತೂರು ಸಾಸ್ತನ ನಗರ ಎಂಬಲ್ಲಿ ವಾಸಿಸುತ್ತಿದ್ದ. ಆರೋಪಿಗಳಿಂದ ಕಳ್ಳತನಕ್ಕೆ ಉಪಯೋಗಿಸಿದ ಟಾಟಾ ಪಂಚ್ ಕಾರು ಮತ್ತು ರೂಪಾಯಿ 24,000 ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ವಿಧಿಸಿರುತ್ತದೆ.
ಜೂನ್ 22ರಂದು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೆಬೆಟ್ಟು ಗ್ರಾಮದ ಕಾಮತ್ ಪೆಟ್ರೋಲ್ ಪಂಪ್ ಬಳಿ ಗಣೇಶ್ ಪ್ರಸಾದ್ ಶೆಟ್ಟಿ ಎಂಬವರ ಮನೆಯ ಬಾಗಿಲನ್ನು 1,20,00 ರೂ. ನಗದು ಮತ್ತು 25,000ರೂ. ಮೌಲ್ಯದ ಒಂದು ಹಳೆ ಚಿನ್ನದ ಸರವನ್ನು ಕಳ್ಳತನ ಮಾಡಿದ್ದರು.
ಇಬ್ರಾಹಿಂ ಕಲಂದರ್ ವಿರುದ್ಧ ಈಗಾಗಲೇ ಕಾಸರಗೋಡು ಜಿಲ್ಲೆಯ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ 2 ದೇವಸ್ಥಾನ ಕಳವು, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 1 ಮನೆ ಕಳವು, ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 1 ದರೋಡೆಗೆ ಪ್ರಯತ್ನ, ಮೇಲ್ಪರಂಬ ಠಾಣೆಯಲ್ಲಿ ಮನೆ ಕಳವು ಹಾಗೂ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಮುನಿಯಲು ಸೊಸೈಟಿ ದರೋಡೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಬ್ಯಾಂಕ್ ದರೋಡೆ ಪ್ರಕರಣ, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳವು ಪ್ರಕರಣ, ಪುತ್ತೂರು ನಗರ ಮತ್ತು ಗ್ರಾಮಾಂತರ ಠಾಣೆಯಲ್ಲಿ 4 ಮನೆ ಕಳವು ಪ್ರಕರಣ, ಕಡಬ ಪೊಲೀಸ್ ಠಾಣೆಯಲ್ಲಿ ಸರ ಕಳ್ಳತನ, ಉಪ್ಪಿನಂಗಡಿ ಠಾಣೆಯಲ್ಲಿ ಅಂಗಡಿ ಕಳವು, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಂಗಡಿ ಕಳವು, ಮಡಿಕೇರಿ ಜಿಲ್ಲೆಯ ಕುಶಾಲನಗರ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದೆ.
ಇನ್ನೋರ್ವ ಆರೋಪಿ ಮೊಹಮ್ಮದ್ ರಿಯಾಜ್ ಅಲಿಯಾಸ್ ಅಲಿಯಾಸ್ ಕಡಪು ರಿಯಾಜ್ ಎಂಬಾತನ ವಿರುದ್ಧ ಕಾಸರಗೋಡು ಜಿಲ್ಲೆಯ ಕುಂಬಳೆ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಹಾಗೂ ಪುತ್ತೂರು ನಗರ ಠಾಣೆಯಲ್ಲಿ ಗಾಂಜಾ ಮಾರಾಟ ಪ್ರಕರಣ ದಾಖಲಾಗಿದೆ.
























