ಫೈಬರ್ ಮೂರ್ತಿ ಎಂದು ಆರೋಪಿಸಿದವರಿಗೆ ತೀವ್ರ ಮುಖಭಂಗ
ಕಾರ್ಕಳ: ಇಲ್ಲಿನ ಬೈಲೂರು ಸಮೀಪ ಉಮ್ಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗಿರುವ ಪರಶುರಾಮ ಥೀಂ ಪಾರ್ಕ್ನ ಪರಶುರಾಮನ ವಿಗ್ರಹದ ವಿವಾದಕ್ಕೆ ಸಂಬಂಧಿಸಿದ ತನಿಖೆ ಪೂರ್ಣಗೊಳಿಸಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ದೋಷಾರೋಪ ಪಟ್ಟಿಯಲ್ಲಿ ಪರಶುರಾಮ ಪ್ರತಿಮೆಯನ್ನು ಹಿತ್ತಾಳೆಯಿಂದ ಮಾಡಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳದ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅದರಲ್ಲಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಲೋಹದಿಂದ ಪರಶುರಾಮ ಮೂರ್ತಿ ನಿರ್ಮಾಣಕ್ಕೆ ಕಂಚಿನ ಬದಲಾಗಿ ಹಿತ್ತಾಳೆ ಬಳಸಿರುವುದು ತಜ್ಞರ ಪರಿಶೀಲನಾ ವರದಿಯಿಂದ ಹಾಗೂ ತನಿಖೆಯಿಂದ ಸಾಬೀತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಪ್ಪಂದದ ಪ್ರಕಾರ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಬೇಕೆಂದಿದೆ. ಆದರೆ ಪ್ರತಿಮೆ ಹಿತ್ತಾಳೆಯದ್ದಾಗಿದೆ ಎನ್ನಲಾಗಿದೆ.
ಆರೋಪಿಗಳಾದ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ ಡೈರೆಕ್ಟರ್ ಅರುಣ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ. ಕುಮಾರ್ ಅಪರಾಧಿಕ ಒಳಸಂಚು ಮತ್ತು ನಂಬಿಕೆ ದ್ರೋಹ ಮತ್ತು ವಂಚನೆ ಎಸಗಿ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಪೊಲೀಸರು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಇವರ ವಿರುದ್ಧ ಕಲಂ. 420, 409, 201, 120 (ಬಿ) ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಇದರೊಂದಿಗೆ ಪ್ರತಿಮೆಯನ್ನು ಫೈಬರ್ನಿಂದ ನಿರ್ಮಿಸಲಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ ಸುಳ್ಳು ಎನ್ನುವುದು ಈ ತನಿಖೆಯಲ್ಲಿ ಸಾಬೀತಾಗಿದೆ. ಕಾರ್ಕಳದ ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಈಗಿನ ಶಾಸಕ ಹಿಂದಿನ ಅವಧಿಯಲ್ಲಿ ಸಚಿವರಾಗಿದ್ದ ಸುನಿಲ್ ಕುಮಾರ್ ಅವರ ಮುತುವರ್ಜಯಿಂದಾಗಿ ಪರಶುರಾಮ ಮೂರ್ತಿಯನ್ನು ನಿರ್ಮಿಸಲಾಗಿತ್ತು. ಆದರೆ ಇದಕ್ಕೆ ಆರಂಭದಿಂದಲೂ ಅಡ್ಡಿ ಉಂಟು ಮಾಡುತ್ತಿದ್ದ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಇದನ್ನು ರಾಜ್ಯಮಟ್ಟದ ವಿವಾದವನ್ನಾಗಿ ಮಾಡಿದ್ದರು. ಇದರ ಪರಿಣಾಮವಾಗಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ಬಂಧನಕ್ಕೊಳಗಾಗಿದ್ದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಡುಪಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಅನೇಕ ಕಾಂಗ್ರೆಸ್ ಸಚಿವರು ಮತ್ತು ನಾಯಕರು ಫೈಬರ್ ಪ್ರತಿಮೆ ಎಂದು ಅಪಪ್ರಚಾರ ಮಾಡಿದ್ದರು.
2023ರ ಜನವರಿ 27ರಂದು ಪರಶುರಾಮ ಥೀಂ ಪಾರ್ಕ್ ಅನ್ನು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದರು. ನಂತರದ ದಿನಗಳಲ್ಲಿ ಅಲ್ಲಿ ಸ್ಥಾಪಿಸಲಾಗಿದ್ದ ಪರಶುರಾಮ ಮೂರ್ತಿಯನ್ನು ಫೈಬರ್ನಿಂದ ನಿರ್ಮಿಸಲಾಗಿದೆ ಹೊರತು ಕಂಚಿನ ಪ್ರತಿಮೆ ಅಲ್ಲ ಎಂದು ಕಾಂಗ್ರೆಸ್ ನಾಯಕರು ಮತ್ತು ಸ್ಥಳೀಯರು ಆರೋಪ ಮಾಡಿದ್ದರು.
ಈ ಸಂಬಂಧ 2024ರ ಜೂನ್ 21 ಕೃಷ್ಣ ಶೆಟ್ಟಿ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನಲ್ಲಿ ಕ್ರಿಶ್ ಆರ್ಟ್ ವರ್ಲ್ಡ್ ಸಂಸ್ಥೆ ಕಂಚಿನ ಪರಶುರಾಮ್ ಮೂರ್ತಿಯನ್ನು ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ ಹಣ ಪಡೆದಿತ್ತು. ಆದರೆ ಆರೋಪಿ ಶಿಲ್ಪಿ ಕೃಷ್ಣ ನಾಯ್ಕ ಕಂಚಿನ ಮೂರ್ತಿ ಮಾಡದೆ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿ ಸರಕಾರಕ್ಕೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.
























