ಬೆಂಗಳೂರು: ಗಾಳಿ ಆಂಜನೇಯ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಸರ್ಕಾರ ಒಪ್ಪಿಸಿದ್ದು, ಇದಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ದೇವಸ್ಥಾನದ ಆಡಳಿತದಲ್ಲಿ ಅವ್ಯವಹಾರ ನಡೆದಿರುವುದು ಸಾಕ್ಷಿ ಸಮೇತ ಬಯಲಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಇಂತಹ ಕ್ರಮ ಕೈಗೊಂಡಿತ್ತು.
ಈ ಆದೇಶವನ್ನು ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಲು ದೇಗುಲದ ಟ್ರಸ್ಟಿ ಹಾಗೂ ಸಂಚಾಲಕ ಮತ್ತು ಇತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ನ್ಯಾ. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವುದಾಗಿದೆ.
ದೇವಸ್ಥಾನದ ಆಡಳಿತದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿ ಬಂದಿದ್ದು, ಕೆಲವು ದಾಖಲೆಗಳನ್ನು ಸರ್ಕಾರ ಸಂಗ್ರಹಿಸಿದೆ. ಆದ್ದರಿಂದ ಸರ್ಕಾರದ ಈ ಆದೇಶವನ್ನು ತಪ್ಪು ಎಂದು ಹೇಳುವುದು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಕೋರ್ಟ್ ನಡುವೆ ಪ್ರವೇಶಿಸಲು ಸಾಧ್ಯವಿಲ್ಲ. ಹಾಗಾಗಿ ಅರ್ಜಿದಾರರ ಮನವಿಯನ್ನು ಪರಿಗಣನೆಗೆ ತೆಗೆದುಕೊಳ್ಳಲಾಗದು ಎಂದು ನ್ಯಾಯಾಲಯ ಹೇಳಿದೆ.
























