ವಿಶ್ವದ ನಂಬರ್ ಒನ್ ಪೇಮೆಂಟ್ ವ್ಯವಸ್ಥೆ ಯುಪಿಐ ಹದಗೆಡಿಸಲು ಕಾಂಗ್ರೆಸ್ ಸಂಚು
ನವದೆಹಲಿ: ಸಣ್ಣ ವ್ಯಾಪಾರಿಗಳಿಗೆ ಕರ್ನಾಟಕ ಸರ್ಕಾರ ನೀಡಿರುವ ತೆರಿಗೆ ನೋಟಿಸ್‌ಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ತೆರಿಗೆ ಬಾಕಿ ನೋಟಿಸ್ ಕೊಟ್ಟು, ಇದೀಗ ರಾಜ್ಯ ಸರ್ಕಾರಕ್ಕೂ ಹಾಗೂ ಜಿಎಸ್‌ಟಿ ನೋಟಿಸ್‌ಗೂ ಯಾವುದೇ ಸಂಬಂಧವಿಲ್ಲ ಅಂತ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಎಂದು ಹೇಳಿದ್ದಾರೆ.
ಸರ್ಕಾರದ ಅಡಿಯಲ್ಲಿ CGST ಮತ್ತು ರಾಜ್ಯ ಸರ್ಕಾರಗಳ ಅಡಿಯಲ್ಲಿ SGST ಎಂಬ ಎರಡು ಭಾಗಗಳಿವೆ. ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿರುವುದು ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆ. ಇದರಲ್ಲಿ ಕೇಂದ್ರ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಯಾವುದೇ ತೀರ್ಮಾನ ತಗೆದುಕೊಳ್ಳಲು ಮಹತ್ವದ ಪಾತ್ರ ವಹಿಸಿರುವುದು ರಾಜ್ಯ ಸರ್ಕಾರಗಳು. ಕೇಂದ್ರ ಸರ್ಕಾರಕ್ಕೆ ಕೇವಲ 3ನೇ ಒಂದು ಭಾಗ ಮಾತ್ರ ಅಧಿಕಾರವಿದೆ. ಉಳಿದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿದೆ. 3ನೇ ಎರಡು ಭಾಗದಷ್ಟು ಅಧಿಕಾರ ಹೊಂದಿರುವ ರಾಜ್ಯ ಸರ್ಕಾರಗಳ ನಿರ್ಣಯವೇ ಅಂತಿಮವಾಗಿರಲಿದೆ ಎಂದು ತಿಳಿಸಿದ್ದಾರೆ.
ಹಣ್ಣು, ಹಾಲು, ತರಕಾರಿ ಸೇರಿದಂತೆ ದಿನನಿತ್ಯದ ಅಗತ್ಯ ಸರಕು ಸೇವಾ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದ ನೋಟಿಸ್ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಸಣ್ಣಪುಟ್ಟ ವ್ಯಾಪಾರಿಗಳಿಗೆ ನೋಟಿಸ್ ನೀಡಿದೆ. ಯುಪಿಐ ಟ್ರಾನ್ಸಾಕ್ಷನ್ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಈ ಮಧ್ಯೆ ರಾಜ್ಯದಲ್ಲಿ ಡಿಜಿಟಲ್ ಟ್ರಾನ್ಸಾಕ್ಷನ್ ಹದಗೆಡಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿರುವುದು ನಿಜಕ್ಕೂ ದುರಂತ ಎಂದು ಕಿಡಿಕಾರಿದ್ದಾರೆ.
ಈ ಮಧ್ಯೆ ರಾಜ್ಯದ ಬಿಜೆಪಿ ನಾಯಕರು ಕೂಡ ಜಿಎಸ್‌ಟಿ ನೋಟಿಸ್ ವಿರುದ್ಧ ಕಿಡಿಕಾರಿದ್ದು, ದೇಶದ ಬೇರೆ ಯಾವುದೇ ರಾಜ್ಯದಲ್ಲೂ ತೆರಿಗೆ ನೋಟಿಸ್ ನೀಡಿಲ್ಲ, ಕರ್ನಾಟಕದಲ್ಲಿ ಮಾತ್ರ ನೋಟಿಸ್ ನೀಡಲಾಗಿದೆ. ಇದರರ್ಥ ಇದು ಕೇಂದ್ರ ಸರ್ಕಾರದ ಕೆಲಸವಲ್ಲ, ರಾಜ್ಯ ಸರ್ಕಾರವೇ ಸಣ್ಣ ವ್ಯಾಪಾರಸ್ಥರಿಗೆ ತೆರಿಗೆ ನೋಟಿಸ್ ನೀಡಿರುವುದು ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಮತ್ತು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ. ರವಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ತೆರಿಗೆ ನೋಟಿಸ್ ಜಾರಿ ಮಾಡುವ ಮೂಲಕ ರಾಜ್ಯ ಸರ್ಕಾರ ಸಣ್ಣ ವ್ಯಾಪಾರಿಗಳು, ಚಿಲ್ಲರೆ ವ್ಯಾಪಾರಿಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಯುಪಿಐ ಬದಲಿಗೆ “ಕೇವಲ ನಗದು ನೀತಿ” ಅಳವಡಿಸಿಕೊಳ್ಳುವಂತೆ ಮಾಡಿದ್ದಾರೆ. ಈ ಮೂಲಕ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಡಿಜಿಟಲ್ ಇಂಡಿಯಾ ಅಭಿಯಾನಕ್ಕೆ ಹಿನ್ನಡೆಯಾಗುವಂತೆ ಮಾಡಿದ್ದಾರೆಂದು ಕಿಡಿಕಾರಿದರು.
ಯಾವುದೇ ಪರಿಶೀಲನೆ ಇಲ್ಲದೆ PhonePe/PayTM ನಂತಹ ಮೂರನೇ ವ್ಯಕ್ತಿಯ ಮಾಹಿತಿಯ ಆಧಾರದ ಮೇಲೆ ನೋಟಿಸ್‌ಗಳನ್ನು ಜಾರಿ ಮಾಡುತ್ತಿದ್ದಾರೆ. ಇದರಿಂದ ಸಣ್ಣ ವ್ಯಾಪಾರಿಗಳು, ಬೀದಿ ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ಭಯಭೀತರಾಗಿದ್ದಾರೆ.
ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯಿಂದ ನೋಟಿಸ್ ಜಾರಿಯಾದ ನಂತರ, ಅನೇಕ ಸಣ್ಣ ವ್ಯಾಪಾರಿಗಳು ಯುಪಿಐ ಮೂಲಕ ಹಣವನ್ನು ಸ್ವೀಕರಿಸುವುದನ್ನು ನಿಲ್ಲಿಸಿದ್ದಾರೆ. ನಗದು ಮಾತ್ರ ಸ್ವೀಕರಿಸುತ್ತಿದ್ದಾರೆ. ಈ ಕುರಿತು ಫಲಕಗಳನ್ನೂ ಹಾಕಿಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತೆರಿಗೆ ಸಂಗ್ರಹವನ್ನು ಹೆಚ್ಚು ಮಾಡುವಂತೆ ನಿರ್ದೇಶನ ನೀಡಿದ್ದರು. ಮುಖ್ಯಮಂತ್ರಿಗಳ ನಿರ್ದೇಶನದಂತೆ ಅಧಿಕಾರಿಗಳು ವ್ಯಾಪಾರಿಗಳಿಗೆ ನೋಟಿಸ್ ನೀಡಿದ್ದಾರೆ. ರಾಜ್ಯ ಸರ್ಕಾರವು ತಕ್ಷಣವೇ ನೋಟಿಸ್‌ಗಳನ್ನು ಹಿಂಪಡೆಯಬೇಕು ಮತ್ತು ಭಯದ ವಾತಾವರಣವನ್ನು ಸೃಷ್ಟಿಸಬಾರದು ಎಂದು ಒತ್ತಾಯಿಸಿದ್ದಾರೆ.
























