ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನೋಡಿ ಜನ ಗಾಬರಿಯಾದಾಗ ನೂಕುನುಗ್ಗಲು
ಹರಿದ್ವಾರ: ಹರಿದ್ವಾರದ ಪ್ರಸಿದ್ಧ ಮಾನಸ ದೇವಿ ದೇವಸ್ಥಾನದಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ದೇವಸ್ಥಾನದ ಸಮೀಪವಿರುವ ವಿದ್ಯುತ್ ಕಂಬದಲ್ಲಿ ಶಅರ್ಟ್ ಸರ್ಕ್ಯೂಟ್ ಆಗಿದ್ದು, ಇದನ್ನು ನೋಡಿ ಭಕ್ತರು ಗಾಬರಿಯಾಗಿ ಓಡ;ಲು ತೊಡಗಿದಾಗ ನೂಕುನುಗ್ಗಲು ಸಂಭವಿಸಿತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿಕೊಂಡಿದ್ದಾರೆ. ಆದರೆ ಪೊಲೀಸರು ಶಾರ್ಟ್ ಸರ್ಕ್ಯೂಟ್ ಅವಗಡಕ್ಕೆ ಕಾರಣ ಎಂದು ಸ್ಪಷ್ಟಪಡಿಸಿಲ್ಲ.
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದಾಗ ಉಂಟಾದ ಕಾಲ್ತುಳಿತದಲ್ಲಿ 6 ಜನರು ಮೃತಪಟ್ಟಿದ್ದಾರೆ. ನಾನು ಸ್ಥಳಕ್ಕೆ ಭೇಟಿ ನೀಡುತ್ತಿದ್ದು, ಘಟನೆಯ ವಿವರವಾದ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗರ್ವಾಲ್ ವಿಭಾಗ ಆಯುಕ್ತ ವಿನಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.
ಹರಿದ್ವಾರದ ಮಾನಸಾ ದೇವಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಸುದ್ದಿ ಕೇಳಿ ತೀವ್ರ ದುಃಖವಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸಂತಾಪ
ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.
























