ಶಿವಮೊಗ್ಗ: ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರಿಗೆ ರೈತರ ಮೇಲೆ ದ್ವೇಷ ಮತ್ತು ತಾತ್ಸಾರ ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ರೈತ ಮೋರ್ಚಾದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ನೀತಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಆಳ್ವಿಕೆಯಲ್ಲಿ ರೈತರು ಕಂಗಾಲಾಗಿದ್ದಾರೆ. ನಾಡಿಗೆ ಅನ್ನ ಕೊಡುವ ರೈತರ ಮೇಲೆ ಸಿದ್ದರಾಮಯ್ಯ ಸರ್ಕಾರಕ್ಕೆ ತಾತ್ಸಾರ ಯಾಕೆ ಎಂದು ಗುಡುಗಿದ್ದಾರೆ.
ಕಾಂಗ್ರೆಸ್ ನಾಯಕರು ರೈತರ ಮೇಲೆ ಕಾಳಜಿ ಇದೆ ಎಂಬಂತೆ ನಾಟಕವಾಡಿ ಮೊಸಳೆ ಕಣ್ಣೀರು ಸುರಿಸುತ್ತಾರೆ. ಹಿಂದಿನ ಬಾರಿ ಕಾಂಗ್ರೆಸ್ ಆಡಳಿತದಲ್ಲಿ 4283 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ 980 ರೈತರು ಕೇವಲ ಎರಡೂವರೆ ವರ್ಷದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಬಂದಿದೆ. ಆದರೆ ಕಾಂಗ್ರೆಸ್ ಸರ್ಕಾರ ರೈತರಿಗೆ ರಸಗೊಬ್ಬರ ವಿತರಣೆ ಮಾಡುವಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ನೀಡಿದ್ದರೂ ಅದನ್ನು ರೈತರಿಗೆ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ಎಡವಿದೆ. ಬೇಜವಾಬ್ದಾರಿತನದಿಂದ ರಾಜ್ಯದ ರೈತರ ಬದುಕನ್ನು ನಾಶ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
























