ಬೆಂಗಳೂರು : ವೇತನವನ್ನು ಶೇ.15ರಷ್ಟು ಹೆಚ್ಚು ಮಾಡುವ ಮುಖ್ಯಮಂತ್ರಿಗಳ ಕೊಡುಗೆಯನ್ನು ತಿರಸ್ಕರಿಸಿರುವ ಸಾರಿಗೆ ನೌಕರರ ಸಂಘ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿದೆ. ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ.
ನಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತು ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ. ನಿಗದಿಯಂತೆ ಮಾ.21ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ ಎಂದು ಕೆಎಸ್‌ಆರ್‌ಟಿಸಿ ನೌಕರರ ಸಂಘದ ಅಧ್ಯಕ್ಷ ಎಚ್.ವಿ.ಅನಂತ ಸುಬ್ಬರಾವ್ ಸ್ಪಷ್ಟಪಡಿಸಿದ್ದಾರೆ.
ಸಾರಿಗೆ ಸಂಘಟನೆಗಳ ಮುಖಂಡರೊಂದಿಗೆ ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯವ್ಯ ಕರ್ನಾಟಕ ಸಾರಿಗೆ) ವ್ಯವಸ್ಥಾಪಕ ನಿರ್ದೇಶಕರು ಬುಧವಾರ ಸಭೆ ನಡೆಸಿದ್ದರು. ಶೇ.15 ವೇತನ ಹೆಚ್ಚಳ ಪ್ರಸ್ತಾವಕ್ಕೆ ಸಂಘಟನೆಗಳ ಮುಖಂಡರು ಒಪ್ಪದಿದ್ದರಿಂದ ಸಂಧಾನ ವಿಫಲವಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶೇ.15ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಏಕಪಕ್ಷೀಯವಾಗಿ ನೀಡಿರುವ ಹೇಳಿಕೆಗೆ ಸಮ್ಮತವಿಲ್ಲ. ಸಾರಿಗೆ ನೌಕರರಿಗೆ ಶೇ.25ರಷ್ಟು ವೇತನ ಹೆಚ್ಚಳ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆದು ಮಾತನಾಡಿದರೆ ಸಮಸ್ಯೆ ಇತ್ಯರ್ಥ ಆಗುತ್ತದೆ. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮೂಲ ವೇತನಕ್ಕೆ ಡಿ.ಎ. ವಿಲೀನಗೊಳಿಸಿ ಪರಿಷ್ಕೃತ ವೇತನ ನೀಡಬೇಕು. ಬಳಿಕ ಆ ಮೂಲ ವೇತನದಲ್ಲಿ ಶೇ 25ರಷ್ಟನ್ನು ಹೆಚ್ಚಳ ಮಾಡುವ ಒಪ್ಪಂದ ಆಗಬೇಕು, ವಜಾಗೊಂಡ ಸಿಬ್ಬಂದಿಯನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು. ಅವರ ವಿರುದ್ಧ ದಾಖಲಾಗಿರುವ ಕೇಸುಗಳನ್ನು ಹಿಂಪಡೆಯಬೇಕು. ಭತ್ಯೆ, ಬಾಟಾ ಹೆಚ್ಚಿಸಬೇಕು ಎಂದು ಹಲವು ಬೇಡಿಕೆಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇವುಗಳ ಬಗ್ಗೆ ಯಾವುದೇ ಚರ್ಚೆ ಮಾಡದೆ ಸರ್ಕಾರ ಕೈಗೊಳ್ಳುವ ನಿರ್ಧಾರ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.