ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಲು ಸಾಧ್ಯವಿಲ್ಲ : ಸಿದ್ದರಾಮಯ್ಯ

ಶ್ರೀನಿವಾಸ ಸಮಿತಿಯ ಶಿಫಾರಸ್ಸು ಒಪ್ಪಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ

ಬೆಂಗಳೂರು: 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿ ಕೊಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ 2020ರ ಜನವರಿಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯ ವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು ಪಟ್ಟು ಹಿಡಿದರು.





















































 
 

ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಿಗಮಗಳ ಆರ್ಥಿಕ ಪರಿಸ್ಥಿತಿ, ವೇತನ ಹೆಚ್ಚಳಕ್ಕೆ ಸಂಬಂಧಿಸಿ 2023ರ ಮಾರ್ಚ್‌ನಲ್ಲಿ ಹಿಂದಿನ ಸರ್ಕಾರ ಮಾಡಿರುವ ಆದೇಶದಲ್ಲಿನ ದೋಷಗಳ ಕುರಿತು ನೌಕರ ಸಂಘಟನೆ ಪ್ರಮುಖರಿಗೆ ತಿಳಿಸಿದರು. ನೌಕರರ ಬೇಡಿಕೆಯಂತೆ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿ ಅಸಾಧ್ಯ. ಕೇವಲ 14 ತಿಂಗಳ ವೇತನ ಹೆಚ್ಚಳ ಹಿಂಬಾಕಿ ನೀಡಲು ಸಿದ್ಧ ಎಂದು ಹೇಳಿದರು.

ಸಂಘಟನೆಗಳು ಕೇಳುತ್ತಿರುವಷ್ಟು ವೇತನ ಹೆಚ್ಚಳ, ಹಿಂಬಾಕಿ ಪಾವತಿ ಸಾಧ್ಯವಿಲ್ಲ. 38 ತಿಂಗಳ ಬದಲು 14 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಪಾವತಿಸಲಾಗುವುದು ಎಂದು ಭರವಸೆ ನೀಡಿದರು. 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ.12.5ರಷ್ಟು ಹೆಚ್ಚಳ ಮಾಡಲಾಗಿತ್ತು. ಬಳಿಕ 2020ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 2023ರ ಮೇ 1ರ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.

ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 2022ರ ಜೂನ್‌ 1ರಿಂದ 2023ರ ಫೆಬ್ರವರಿ 28ರ ವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು ಎಂದು ಮನವೊಲಿಸಲು ಪ್ರಯತ್ನಿಸಿದ್ದಾರೆ.

error: Content is protected !!
Scroll to Top