ಕೆಂಪುಕಲ್ಲು ಗಣಿಗಾರಿಕೆಗೆ ಶೀಘ್ರ ಸರಳ ನಿಯಮ ರಚನೆ

ಹೋರಾಟಕ್ಕೆ ಮಣಿದ ಸರ್ಕಾರ; ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಹೊಸ ನಿಯಮ ರಚಿಸುವ ತೀರ್ಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಇತ್ತೀಚೆಗೆ ತಲೆದೋರಿರುವ ಕೆಂಪುಕಲ್ಲು ಅಭಾವದ ವಿರುದ್ಧ ನಡೆಸಿದ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದ್ದು, ಸರ್ಕಾರ ಶೀಘ್ರದಲ್ಲೇ ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಹೊಸ ನಿಯಮ ರಚಿಸಲು ನಿರ್ಧರಿಸಿದೆ. ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ವಿಚಾರದಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ಕೆಲ ತಿಂಗಳಿಂದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ ಕರಾವಳಿಯಲ್ಲಿ ತೀವ್ರಗೊಂಡು ಹಲವು ಹೋರಾಟಗಳು ನಡೆದಿದ್ದವು. ಕೆಂಪುಕಲ್ಲು ಮತ್ತು ಮರಳು ಇಲ್ಲದ ಕಾರಣ ನಿರ್ಮಾಣ ಉದ್ಯಮ ಸ್ಥಗಿತಗೊಂಡು ಕೂಲಿ ಕಾರ್ಮಿಕರು, ಗುತ್ತಿಗೆದಾರರು, ಸಾಗಾಟದಾರರು ಸೇರಿದಂತೆ ಎಲ್ಲರಿಗೂ ಸಮಸ್ಯೆಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಬಜೆಪಿ ತೀವ್ರ ಹೋರಾಟ ಮಾಡಿತ್ತು.





















































 
 

ಆ.12ರಂದು ಶುರುವಾದ ಮುಂಗಾರು ಅಧಿವೇಶನದ ಆರಂಭದಲ್ಲೇ ಕರಾವಳಿ ಭಾಗದ ಶಾಸಕರು ಕೆಂಪುಕಲ್ಲು ಅಭಾವದ ಬಗ್ಗೆ ಮಾತನಾಡಿ ಸರ್ಕಾರದ ಗಮನ ಸೆಳೆದಿದ್ದರು. ಇದರ ಬೆನ್ನಿಗೆ ಮಂಗಳವಾರ ಸ್ಪೀಕರ್‌ ಯು.ಟಿ.ಖಾದರ್‌ ಮುತುವರ್ಜಿಯಿಂದಾಗಿ ವಿಧಾನಸೌಧದಲ್ಲಿ ಸಭೆ ಕರೆದು ಹೊಸ ನಿಯಮ ರಚಿಸುವ ತೀರ್ಮಾನ ಕೈಗೊಳ್ಳಲಾಯಿತು.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳಲ್ಲಿ ನಡೆದ ಚರ್ಚೆಗಳು ಹಾಗೂ ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರಿತಂತೆ ಸಭೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು. ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಲೈಸೆನ್ಸ್‌ ಕೊಡುವ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುವುದು. ಈ ನಿಟ್ಟಿನಲ್ಲಿ ಎಸ್‌ಒಪಿ ಡ್ರಾಫ್ಟನ್ನು ಸಿದ್ಧಪಡಿಸುತ್ತಿರುವ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ಮಾಹಿತಿ ಒದಗಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಯಲ್ಟಿಯನ್ನು ಕಡಿಮೆಗೊಳಿಸಿ, ನಿಯಮಬದ್ಧವಾಗಿ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡಲು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗೆಗಳನ್ನು ದೊರಕಿಸಿಕೊಡುವತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.

ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗಣಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

error: Content is protected !!
Scroll to Top